ಕರ್ನಾಟಕ ಮಾಡೆಲ್ ದೇಶಕ್ಕೇ ಮಾದರಿ
ಬೆಂಗಳೂರು: ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದೇಶಕ್ಕೇ ಮಾದರಿಯಾಗಿ ಹೊರಹೊಮ್ಮಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ನಿರ್ದಿಷ್ಠ ಮಾನದಂಡಗಳೊಂದಿಗೆ ಸುಸ್ಥಿರ ಅಭಿವೃದ್ಧಿಯ ಗುರಿ ಸಾಧಿಸುವಲ್ಲಿ ಉತ್ತಮ ಸಾಧನೆ ತೋರಿರುವ ಗ್ರಾಮ ಪಂಚಾಯತಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಕೇಂದ್ರ ಸರ್ಕಾರ ಕೊಡಮಾಡುವ ಪ್ರಶಸ್ತಿಗಳಲ್ಲಿ ಕರ್ನಾಟಕವು ದೇಶದ ಗಮನ ಸೆಳೆದಿದೆ.
◆ ದೇಶದ ಸುಮಾರು 2.5 ಲಕ್ಷ ಗ್ರಾಮ ಪಂಚಾಯಿತಿಗಳಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿಯು ಬಡತನ ಮುಕ್ತ ಮತ್ತು ಜೀವನೋಪಾಯ ಅಭಿವೃದ್ಧಿ ವಿಷಯಗಳಲ್ಲಿ ಪ್ರಥಮ ಸ್ಥಾನ ಗಳಿಸಿದೆ.
◆ 9 ವಿಷಯಗಳಲ್ಲಿ ತನ್ನ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಸರ್ವೋತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪಂಚಾಯಿತಿಯು ರಾಷ್ಟ್ರೀಯ ಮಟ್ಟದಲ್ಲಿ "ನಾನಾಜಿ ದೇಶಮುಖ್ ಸರ್ವೋತ್ತಮ ಪಂಚಾಯತ್ ಸತತ ವಿಕಾಸ ಪುರಸ್ಕಾರ"ದ ಅಡಿಯಲ್ಲಿ ತೃತೀಯ ಸ್ಥಾನ ಗಳಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಉತ್ತಮ ಕಾರ್ಯನಿರ್ವಣೆಯ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವುದು ನಮ್ಮ ಸರ್ಕಾರಕ್ಕೆ ಹೆಮ್ಮೆಯ ವಿಷಯ. ಈ ಸಾಧನೆಯ ಮೂಲಕ ನಾವು ಹೇಳುತ್ತಿದ್ದ "ಕರ್ನಾಟಕ ಮಾಡೆಲ್" ಸಾಕಾರವಾಗುತ್ತಿದೆ ಎಂದಿದ್ದಾರೆ.