ವಿಮಾನದಲ್ಲಿ ಸಿಗರೇಟ್ ಸೇವನೆ: ಪ್ರಕರಣ ದಾಖಲು
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವು ಲ್ಯಾಂಡಿಂಗ್ ಆಗುವುದಕ್ಕೂ ಮುನ್ನ ಸಿಗರೇಟ್ ಸೇವನೆ ಮಾಡಿದ ಆರೋಪದ ಮೇಲೆ ಯುವಕನ ವಿರುದ್ಧ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕ ವಿಮಾನದಲ್ಲಿ ಸಿಗರೇಟ್ ಸೇವನೆ ಮಾಡಿದ ಹಿನ್ನೆಲೆಯಲ್ಲಿ ಶನಿವಾರ ಇಂಡಿಗೋ ವಿಮಾನ ಸಂಸ್ಥೆಯ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮುಶದೀಕ್ ಹುಸೈನ್ (೨೪) ಎಂಬಾತನ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಯುವಕ ಅಬುಧಾಬಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದ. ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಕೆಲ ಸಮಯಕ್ಕೂ ಮುನ್ನ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇವನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ವಿಮಾನದ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಬಗ್ಗೆ ಇಂಡಿಗೋ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.