ಅವ್ಯವಹಾರದಿಂದ ಕಿಮ್ಸ್ ಹೆಸರಿಗೆ ಮಸಿ ಬಳಿದರೆ ಮುಲಾಜಿಲ್ಲದೇ ಕ್ರಮ
ಕಿಮ್ಸ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಎಚ್ಚರಿಕೆ
ಕೊಪ್ಪಳ: ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿ ನೇಮಕಾತಿ ಹಾಗೂ ಸಾಮಗ್ರಿ ಖರೀದಿ ಸೇರಿದಂತೆ ಯಾವುದೇ ವಿಷಯದಲ್ಲಿ ಅವ್ಯವಹಾರಕ್ಕೆ ಅವಕಾಶವಿಲ್ಲದ ಹಾಗೆ ಆಡಳಿತ ನಡೆಸುವ ಮೂಲಕ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಮಾದರಿಯಾಗಬೇಕು. ಅಲ್ಲದೇ ಅವ್ಯವಹಾರದ ಮಾಡಿ, ಕಿಮ್ಸ್ ಹೆಸರಿಗೆ ಮಸಿ ಬಳಿದರೆ ಮಾಲಾಜಿಲ್ಲದೇ ಕ್ರಮ ಕೈಗೊಳ್ಳತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಕಿಮ್ಸ್ ಸಂಸ್ಥೆಯ ನಿರ್ದೇಶಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ವಿವಿಧ ಪ್ರಾಧ್ಯಾಪಕರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಚಾಲ್ತಿಯಲ್ಲಿರುವ ಕಾಮಗಾರಿಗಳು ಗುಣಮಟ್ಟದ ರೀತಿಯಲ್ಲಿ ನಡೆಯಬೇಕು. ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಕಳಪೆ ಕಾಮಗಾರಿಯಾಗಿದ್ದರೆ ಗುತ್ತಿಗೆದಾರರಿಗೆ ನೊಟೀಸ್ ಜಾರಿ ಮಾಡಿ. ಸಂಸ್ಥೆಯ ಸುಪರ್ದಿಗೆ ಪಡೆಯುವ ಮೊದಲು ಕಟ್ಟಡದ ಕಾಮಗಾರಿಯ ಗುಣಮಟ್ಟದ ಬಗ್ಗೆ ಪರಿಶೀಲಿಸಿ ಎಂದು ಸಚಿವರು ತಿಳಿಸಿದರು.
ಜಿಲ್ಲೆಯು ಬಯಲುಸೀಮೆಯ ನೆಲವಾಗಿದ್ದು, ಇಲ್ಲಿನ ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಇನ್ನು ಸುಧಾರಿಸಬೇಕಿದೆ. ಮುಖ್ಯವಾಗಿ ಇಲ್ಲಿನ ಜನತೆಗೆ ಉತ್ತಮವಾದ ಆರೋಗ್ಯ ಸೌಕರ್ಯ ದೊರೆಯಬೇಕಿದೆ. ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಬಗ್ಗೆ ಸಾಕಷ್ಟು ಭರವಸೆ ಇದೆ. ಇದನ್ನು ಅರ್ಥೈಸಿಕೊಳ್ಳಬೇಕು. ಅವ್ಯವಹಾರ ನಡೆಸಿ ಯಾರಾದರು ಸಂಸ್ಥೆಯ ಹೆಸರಿಗೆ ಮಸಿ ಬಳಿದರೆ ಯಾರೇ ಇರಲಿ ಅಂತವರ ವಿರುದ್ಧ ಮುಲಾಜಿಲ್ಲದೇ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಂಸ್ಥೆಯಲ್ಲಿ ಈಗಾಗಲೇ ರಚನೆಯಾಗಿರುವ ಎಲ್ಲ ಸಮಿತಿಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲೇಜುಗಳಲ್ಲಿ ಪಿಡುಗಾಗಿ ಪರಿಣಮಿಸಿದ ರಾಗಿಂಗಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಒತ್ತಡ ಮುಕ್ತ ವಾತಾವರಣ ಇರುವ ಹಾಗೆ ನೋಡಿಕೊಳ್ಳಬೇಕು. ಬದಲಾದ ಕಾಲಘಟ್ಟದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಸಾಕಷ್ಟು ಮಹತ್ವ ಬರುತ್ತಿದೆ. ಬಹಳಷ್ಟು ನಿರೀಕ್ಷೆಯೊಂದಿಗೆ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ತೆಗೆದುಕೊಳ್ಳುವ ವಿದ್ಯಾರ್ಥಿಗಳ ಮನೋಭಾವನೆ ಅರಿತು ಅವರಿಗೆ ಗುಣಮಟ್ಟದ ರೀತಿಯ ಬೋಧನಾ ವ್ಯವಸ್ಥೆ ಕಲ್ಪಿಸಬೇಕು ಎಂದು ಎಲ್ಲ ವಿಭಾಗಗಳ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರಿಗೆ ಸಲಹೆ ನೀಡಿದರು.
ಸಂಸ್ಥೆಯ ಕಟ್ಟಡ ನಿರ್ಮಾಣ, ಸದ್ಯದ ಪರಿಸ್ಥಿತಿ, ಈ ಹಿಂದೆ ಕರೆದ ಟೆಂಡರಗಳ ಸ್ಥಿತಿಗತಿ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಚಿವರು ಚರ್ಚಿಸಿದರು.
ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಒಟ್ಟು 81 ಹುದ್ದೆಗಳು ಮಂಜೂರಾಗಿವೆ. ಈ ಪೈಕಿ ಈಗಾಗಲೇ 49 ಹುದ್ದೆಗಳು ಭರ್ತಿಯಾಗಿವೆ. 32 ಹುದ್ದೆಗಳು ಖಾಲಿ ಇವೆ ಎಂದು ಸಂಸ್ಥೆಯ ನಿರ್ದೇಶಕ ವೈಜನಾಥ ಇಟಗಿ ಮಾಹಿತಿ ನೀಡಿದರು.
ಸಂಸದ ರಾಜಶೇಖರ ಹಿಟ್ನಾಳ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಸುಜಾತಾ ರಾಠೋಡ್, ಜಿಲ್ಲಾಧಿಕಾರಿ ನಲಿನ್ ಅತುಲ್ ಇದ್ದರು.