ಇಂದು ಜನಿಸುವ ಹೆಣ್ಣುಮಕ್ಕಳಿಗೆ ವಿಶೇಷ ಉಡುಗೊರೆಗೆ ಸೂಚನೆ
ಬೆಂಗಳೂರು: ಜನವರಿ ೨೪ರಂದು ಜನಿಸುವ ಹೆಣ್ಣು ಮಕ್ಕಳಿಗೆ ರಾಜ್ಯ ಸರ್ಕಾರ ವಿಶೇಷ ಉಡುಗೊರೆ ನೀಡಲಿದೆ.
ರಾಜ್ಯದಲ್ಲಿ ಜ. ೨೪ರಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನು ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆಯನ್ನು ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಜನಿಸುವ ಎಲ್ಲ ಹೆಣ್ಣು ಮಕ್ಕಳಿಗೆ ವಿಶೇಷ ಉಡುಗೊರೆ ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.
ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ರಾಜ್ಯದಾದ್ಯಂತ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಆಸ್ಪತ್ರೆಗಳಲ್ಲಿ ಪಿಂಕ್ ಲೈಟಿಂಗ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ಸ್ಪೆಷಲ್ ಗಿಫ್ಟ್ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ೧೦೦೦ ರೂ ಬೆಲೆಯ ಮಕ್ಕಳ ಕಿಟ್ಸ್ ಗಳನ್ನು ಜನಿಸಿದ ಹೆಣ್ಣುಮಗುವಿಗೆ ಉಡುಗೊರೆಯಾಗಿ ನೀಡಲು ಆರೋಗ್ಯ ಇಲಾಖೆ ಎಲ್ಲ ಜಿಲ್ಲೆಯ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.