ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ
ಬೆಂಗಳೂರು: ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿರುವ ಅವರು ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ.
ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ
ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ನಲ್ಲೇ ಘೋಷಿಸಿದರು. ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಬಿಜೆಪಿ ಸರ್ಕಾರದ ಅಸಹಕಾರದ ಹೊರತಾಗಿಯೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ.
2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ ಕ್ಲಿಯರೆನ್ಸ್ ಪತ್ರ ನೀಡಲು ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ.