ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಲ್ಯಾಣ ಕರ್ನಾಟಕ‌ದ ಸಮಗ್ರ ಅಭಿವೃದ್ದಿಗಾಗಿ ಸಿಎಂ ನೇತೃತ್ವದಲ್ಲಿ‌ ಸಚಿವ ಸಂಪುಟ ಸಭೆ

01:41 PM Sep 16, 2024 IST | Samyukta Karnataka

ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹುದ್ದೆ ತುಂಬಲಾಗುವುದು

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಸೆ. 17 ರಂದು ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆ‌ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ‌ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ‌ ಭಾಗದ ಜನರ ಬಹು ನಿರೀಕ್ಷೆಯ‌ಂತೆ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕಲಬುರಗಿಯಲ್ಲಿ ಸೆ. 17 ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.

ನಮ್ಮ ಭಾಗದ ಎಲ್ಲ ಶಾಸಕರ ಬೇಡಿಕೆಯ ಪಟ್ಟಿ ನೋಡಿದರೆ ರಾಜ್ಯದ ಬಜೆಟ್ ಗಾತ್ರದಷ್ಟಾಗುತ್ತದೆ. ಆದರೆ ಮ್ಯಾಕ್ರೋ ಯೋಜನೆಯಡಿಯಲ್ಲಿ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಸಲ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ ವರ್ಷವಾದರೂ ಯೋಜನೆ ಬರುತ್ತವೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಸಚಿವರು ತಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಇಂಜಿನಿಯರ್‌ಗಳ ಹುದ್ದೆ ಭರ್ತಿ ಮಾಡಲಾಗಿದೆ ಎಂದರು.

ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು ಎಂದು ಹೇಳಿದ ಖರ್ಗೆ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು. ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು ಎಂದು ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಹೇಳಿದರು.

ಮುನಿರತ್ನ ವಿರುದ್ಧ ಪ್ರತಿಭಟನೆ ಮಾಡಲಿ: ಪ್ರತಿಭಟನೆ ಮಾಡುವುದಿದ್ದರೆ ಶಾಸಕ ಮುನಿರತ್ನ ವಿರುದ್ದ ಮಾಡಲಿ ಅದಕ್ಕೂ ಮೊದಲು ಶಿಕ್ಷಣ ಸಂಸ್ಥೆಗಾಗಿ ಪಡೆದ ಜಾಗದಲ್ಲಿ ಬಿರಿಯಾನಿ ಹೊಟೇಲ್ ನಡೆಸುತ್ತಿರುವುದರ ಬಗ್ಗೆ ಸ್ಪಷ್ಟನೆ ನೀಡಲಿ. ಅದು ಬಿಟ್ಟು ಇಲ್ಲಿ ಬಂದು ಡ್ರಾಮಾ ಮಾಡಬಾರದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ‌ ನಾರಾಯಣಸ್ವಾಮಿ‌ ಅವರಿಗೆ ಟಾಂಗ್ ನೀಡಿದರು.

ಫಾಸ್ಟ್ ಟ್ರಾಕ್ ಕೋರ್ಟ್ ಆಗಬೇಕಿರುವುದು ಬಿಜೆಪಿ ಹಗರಣದ ಬಗ್ಗೆ ವಿಚಾರಣೆ ನಡೆಸಲು ಹೊರತು ದರ್ಶನ್ ಕೇಸ್ ಬಗ್ಗೆ ವಿಚಾರಣೆ ನಡೆಸಲು ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾಗಮಂಗಲ ಗಲಭೆ ವಿಚಾರ, ಸಮಗ್ರ ತನಿಖೆ ನಡೆಸಲಾಗುತ್ತಿದೆ. ಅದರ ಹಿಂದೆ ಯಾರೇ ಇದ್ದರೂ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಈಗಾಗಲೇ ಹೇಳಿದ್ದಾರೆ ಎಂದು ಖರ್ಗೆ, ಗಲಭೆ ಬಗ್ಗೆ ಪರಿಶೀಲನೆ ಮಾಡಲು ಬಿಜೆಪಿ ಸತ್ಯಶೋಧನೆ ಸಮತಿ ರಚಿಸಿರುವ ಬಗ್ಗೆ ವ್ಯಂಗ್ಯವಾಡಿದರು. ರಾಜ್ಯದಲ್ಲಿ ಬರಗಾಲ ಇದ್ದಾಗ ಬಿಜೆಪಿ ಯಾಕೆ ಸತ್ಯಶೋಧನೆ ಸಮಿತಿ ರಚನೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು. ನಾಗಮಂಗಲ ಗಲಭೆ ಬಗ್ಗೆ ಮಾತನಾಡುವ ಪ್ರಧಾನಿ ಯಡಿಯೂರಪ್ಪನವರ ಪೋಕ್ಸೋ ಕೇಸಿನ ಬಗ್ಗೆ, ಮುನಿರತ್ನ ಕೇಸಿನ ಬಗ್ಗೆ ಯಾಕೆ ಮಾತನಾಡಲ್ಲ ? ಅವರಿಗೆ ಮಾಹಿತಿ ಹೋಗಿರುತ್ತದೆ ತಾನೇ ? ಎಂದು ಪ್ರಿಯಾಂಕ್ ಪ್ರಶ್ನಿಸಿದರು.

30,000 ಹುದ್ದೆ ಭರ್ತಿ: 2013-18 ರ ಅವಧಿಯಲ್ಲಿ ಕಕ ಭಾಗದ13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು‌ ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹುದ್ದೆ ತುಂಬಲಾಗುವುದು ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹುದ್ದೆ ತುಂಬಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ‌ ಶರಣಪ್ರಕಾಶ್ ಪಾಟೀಲ್ ಹೇಳಿದರು.

ನಮ್ಮ ಸರ್ಕಾರದ ಅವಧಿ ಮುಗಿಯುವದರೊಳಗೆ 50,000 ಖಾಲಿ‌ಹುದ್ದೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ‌ ಸಿಎಂ ಭರವಸೆ ನೀಡಿದ್ರು ಅದಕ್ಕೆ ಬದ್ಧವಾಗಿದ್ದೇವೆ ಎಂದರು.

ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕರಾತ್ಮಕ ರಾಜಕೀಯ ಮಾಡದೆ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ ಎಂದು ಪಾಟೀಲ್ ಕುಟುಕಿದರು.

Tags :
#ಕಲಬುರಗಿ
Next Article