ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ
ನವದೆಹಲಿ: ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ಮಧ್ಯಪ್ರವೇಶ ಮಾಡಿ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರಿಗೆ ಬುಧವಾರ ಮನವಿ ಮಾಡಿದರು.
ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವರು, ೨೦೨೪ರ ಅ. ೯ರಂದು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು ತನ್ನ ೮೦ನೇ ಸಭೆಯಲ್ಲಿ ಕರ್ನಾಟಕದ ಅರ್ಜಿ ವಿಚಾರಣೆಯನ್ನು ಮುಂದೂಡಿ ಈ ವಿಚಾರವಾಗಿ ಇರುವ ಕಾನೂನು ಸಮಸ್ಯೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ರಾಜ್ಯವು ದಿನಾಂಕ ಅ. ೧೦ರಂದು ಹಾಗೂ ಅ. ೧೬ರಂದು ಅಗತ್ಯ ಸ್ಪಷ್ಟನೆಯನ್ನು ಪತ್ರದ ಮೂಲಕ ಸಲ್ಲಿಕೆ ಮಾಡಿದೆ. ಕಳಸಾ ನಾಲೆ ಯೋಜನೆಗೆ ಕಾಳಿ ಹಾಗೂ ಸಹ್ಯಾದ್ರಿ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ೧೦.೬೮೫೨ ಹೆಕ್ಟೇರ್ ಅರಣ್ಯ ಭೂಮಿ ಅಗತ್ಯವಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಸುತ್ತಲಿನ ಹಳ್ಳಿಗಳ ಪ್ರದೇಶವನ್ನು ಇದು ಹೊಂದಿದೆ. ಇದರಲ್ಲಿ ಜಾಕ್ ವೆಲ್ ಸಹಿತ ಪಂಪ್ ಹೌಸ್, ವಿದ್ಯುತ್ ಉಪಕೇಂದ್ರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮನವರಿಕೆ ಮಾಡಿದರು.