For the best experience, open
https://m.samyuktakarnataka.in
on your mobile browser.

ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು

12:55 PM May 23, 2024 IST | Samyukta Karnataka
ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು

ಬೆಂಗಳೂರು: ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬರ ನಿರ್ವಹಣೆ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಅಗತ್ಯ ಸಲಹೆ ಸೂಚನೆ ನೀಡಿರುವ ಅವರು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ.

ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ: ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ 2.95 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಇತ್ತು, 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿಯಿದೆ. ಜೂನ್‌ 6 ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು.

ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು: ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರ್‌ಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ? ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು. ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಜಿಲ್ಲಾಧಿಕಾರಿಗಳೇ ನೇರ ಹೊಣೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕ್ರಮ ಜರುಗಿಸಲಾಗುವುದು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ. 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು.

ಮೈಸೂರಿನ ಎರಡು ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ: ಟಿ. ನರಸೀಪುರ ತಾಲ್ಲೂಕು ತಗಡೂರು ಹಾಗೂ ಕೆ.ಸಾಲುಹುಂಡಿ ಗ್ರಾಮಗಳಲ್ಲಿ ಕಾಲರಾ ಕಂಡುಬಂದಿದೆ. ಕಲುಷಿತ ನೀರು ಕುಡಿದು ಕಾಲರಾ ಉಂಟಾಗಿದೆ. ಸಂಬಂಧಪಟ್ಟ ಎಂಜಿನಿಯರುಗಳು ಕುಡಿಯಲು ಯೋಗ್ಯ ನೀರು ಒದಗಿಸುವಲ್ಲಿ ವಿಫಲವಾಗಿದ್ದಾರೆ. ಕುಡಿಯುವ ನೀರಿನ ಮೂಲ ಕುಡಿಯಲು ಯೋಗ್ಯವಾಗಿದೆಯೇ ಇಲ್ಲವೇ ಎಂದು ಪರಿಶೀಲಿಸದೆ ಇರುವುದು ದೊಡ್ಡ ಅಪರಾಧ. ಕೆ. ಸಾಲುಹುಂಡಿಯಲ್ಲಿ 40 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ, ಒಬ್ಬ ಯುವಕ ಮೃತಪಟ್ಟಿದ್ದಾನೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿರುವುದು. ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು.

ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ: ಫೆಬ್ರವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್‌ ಕೊನೆಯ ವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು ಎಂದಿದ್ದಾರೆ.

ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು: ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ವಿಮಾ ಕಂಪನಿಗಳ ನಡವಳಿಕೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ. ಆದ್ದರಿಂದ ಈ ಕುರಿತು ಮುಂಚಿತವಾಗಿಯೇ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು.