For the best experience, open
https://m.samyuktakarnataka.in
on your mobile browser.

ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ…

05:03 PM Oct 05, 2024 IST | Samyukta Karnataka
ಕುಮಾರಸ್ವಾಮಿ ವೀರನೂ ಅಲ್ಲ  ಶೂರನೂ ಅಲ್ಲ…

ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜೀನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ, ಬಗ್ಗೋನೂ ಅಲ್ಲ.

ರಾಯಚೂರು: ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ಧರಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಮಾನ್ವಿಯಲ್ಲಿ ₹458.42. ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ದ್ವೇಷ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸುತ್ತೀರ? ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಭಾಗ್ಯಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ರಾಜಕೀಯಕ್ಕೆ ಎಳೆದು ತರಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು? ಬಿಜೆಪಿ - ಜೆಡಿಎಸ್‌ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ಧರಾಗಿ, ಕೊಟ್ಟ ಕುದುರೆ ಏರಲಾರದ ಹೆಚ್.ಡಿ. ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಜನರಿಗೆ ಸಹಾಯ ಮಾಡುವ ಅವಕಾಶ ಇತ್ತು. ರಾಜ್ಯದ ಅಭಿವೃದ್ಧಿ ಮಾಡುವ ಅವಕಾಶವೂ ಇತ್ತು. ಅಧಿಕಾರ, ಅವಕಾಶ ಇದ್ದಾಗ ಜನಪರ ಕೆಲಸ ಮಾಡದ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಈಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯದ ಬೊಕ್ಕಸ ಖಾಲಿ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದಾಗಲೂ ಜನರ ಕೆಲಸ ಮಾಡಲಿಲ್ಲ. ಬಿಜೆಪಿ ಸ್ವಂತ ಶಕ್ತಿ ಮೇಲೆ ಇವತ್ತಿನವರೆಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಏನಿದ್ದರೂ ಆಪರೇಷನ್ ಕಮಲದ ಮೂಲಕ ಮಾತ್ರ ಬಿಜೆಪಿ ಅಧಿಕಾರ ಹಿಡಿದಿದೆ. ಹೀಗಾಗಿ ಅವರಿಗೆ ಜನರ ಅಭಿವೃದ್ಧಿ ಬೇಕಾಗಿಲ್ಲ. ಬೈಪಾಸ್ ಹಾದಿಯಲ್ಲೇ ಅಧಿಕಾರ ಹಿಡಿಯಲು ಕಾದು ಕುಳಿತಿದ್ದಾರೆ. ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜೀನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ, ಬಗ್ಗೋನೂ ಅಲ್ಲ. ಇಲ್ಲಿಯೇ ಇದ್ದು ಹೋರಾಟ ಮುಂದುವರೆಸುತ್ತೇನೆ. ನನ್ನನ್ನು ಕೆಳಗೆ ಇಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಸೋಲಿಸುತ್ತೇನೆ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ. ಬಿಜೆಪಿಗೆ ನೀವೂ ತಕ್ಕ ಪಾಠ ಕಲಿಸಬೇಕು. ಇಂದು ಇಲ್ಲಿ ಇಂಥದ್ದೊಂದು ಅಭೂತಪೂರ್ವ ಸ್ವಾಭಿಮಾನಿ ಜನ ಸಮಾವೇಶ ಸಂಘಟಿಸಿದ ಬೋಸರಾಜು ಮತ್ತು ರವಿ ಬೋಸರಾಜು ಅವರಿಗೆ ಅಭಿನಂದನೆಗಳು ಎಂದರು.

Tags :