For the best experience, open
https://m.samyuktakarnataka.in
on your mobile browser.

ಕೆಪಿಎಸ್‌ಸಿ: ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸತ್ವ ಪರೀಕ್ಷೆ

02:01 PM Sep 02, 2024 IST | Samyukta Karnataka
ಕೆಪಿಎಸ್‌ಸಿ  ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸತ್ವ ಪರೀಕ್ಷೆ

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ.
ಕೆಪಿಎಸ್‌ಸಿ ಮರುಪರೀಕ್ಷೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರುಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ ಪರಿಗಣಿಸಿ ಈ ಹಿಂದೆ ಆದ ತಪ್ಪುಗಳು, ಲೋಪದೋಷಗಳು ಮರುಕಳಿಸದಂತೆ ಅತ್ಯಂತ ಜಾಗರೂಕತೆಯಿಂದ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಮಾಡಬೇಕು. ಕೆಪಿಎಸ್ ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಪ್ರಶ್ನೆ ಆಗಿರುವುದರಿಂದ ಅವರ ಬದುಕಿನ ಜೊತೆ ಚೆಲ್ಲಾಟವಾಡದೆ, ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಸುವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ನಡೆಯುವಂತೆ ಎಚ್ಚರವಹಿಸಬೇಕು. ಕೆಪಿಎಸ್ ಸಿ ಪರೀಕ್ಷೆ ಕಡೆಗೆ ಈಗ ಇಡೀ ದೇಶವೇ ಎದುರು ನೋಡುತ್ತಿದ್ದು, ಇದು ಈಗ ಕೇವಲ ಅಭ್ಯರ್ಥಿಗಳ ಪರೀಕ್ಷೆಯಾಗಿ ಉಳಿದಿಲ್ಲ. ಇದು ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸತ್ವ ಪರೀಕ್ಷೆಯಾಗಿದೆ ಎಂದಿದ್ದಾರೆ.

Tags :