ಕ್ರೂಸರ್ ಪಲ್ಟಿ: ಇಬ್ಬರ ಸಾವು
ಬೆಳಗಾವಿ: ಮರಕ್ಕೆ ಕ್ರ್ಯೂಸರ್ ವಾಹನ ಡಿಕ್ಕಿ ಹೊಡೆದು ಪಲ್ಟಿಯಾಗಿ ಓರ್ವ ವೃದ್ಧ ಸೇರಿ ಇಬ್ಬರು ಮೃತಪಟ್ಟು ೨೦ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡ ಘಟನೆ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದಲ್ಲಿ ನಡೆದಿದೆ.
ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಈ ಜನ ಕೂಲಿ ಕೆಲಸಕ್ಕೆಂದು ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ತೆರಳಿದ್ದರು. ಕೂಲಿ ಕೆಲಸ ಮುಗಿಸಿ ಸ್ವಗ್ರಾಮ ಚುಂಚನೂರಿಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಚುಂಚನೂರು ಗ್ರಾಮದ ಕೆಂಚಪ್ಪ ಈರಣ್ಣವರ(೫೦) ಸ್ಥಳದಲ್ಲೇ ಮೃತಪಟ್ಟಿದ್ದರೆ, ೧೬ ವರ್ಷದ ಬಾಲಕ ಬಸಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ೨೦ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹತ್ತಿ ಬಿಡಿಸಲು ಕೃಷಿ ಕಾರ್ಮಿಕರು ಹೆಬ್ಬಳ್ಳಿ ಗ್ರಾಮಕ್ಕೆ ತೆರಳಿ ವಾಪಸ್ ಆಗುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.