ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗಣರಾಜ್ಯೋತ್ಸವ ಸ್ತಬ್ಧಚಿತ್ರ - 2025: ರಾಜ್‌ಪಥ್‌ನಲ್ಲಿ ಲಕ್ಕುಂಡಿಯ ಶಿಲ್ಪಕಲೆ

10:24 AM Jan 23, 2025 IST | Samyukta Karnataka

ಕರ್ನಾಟಕವು 15 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿದೆ

ನವದೆಹಲಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಳ್ಳಲು ಲಕ್ಕುಂಡಿ ಶಿಲ್ಪಕಲೆ ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್‌) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.
ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಲು ಹೊರಟಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಇಲಾಖೆಯ ಆಯುಕ್ತರಾದ ಹೇಮಂತ್‌ ಎಂ ನಿಂಬಾಳ್ಕರ್‌, ಐಪಿಎಸ್‌ ಅವರು ಹೇಳಿದ್ದಾರೆ.

ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ. ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ. ಅಹಿಂಸಾವಾದಿಯ ನೆಲೆಬೀಡು. ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿವೆ. ಜೊತೆಗೆ, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಇದೇ ಜನವರಿ 26 ರಂದು ಎಲ್ಲರ ಮನಸೂರೆಗೊಳ್ಳಲಿದೆ ಎನ್ನುವ ವಿಶ್ವಾಸ ಹೊಂದಿರುವುದಾಗಿ ವಾರ್ತಾ ಇಲಾಖೆಯ ಆಯುಕ್ತರು ತಿಳಿಸಿದರು. ಇಲಾಖೆಯು ಕಳೆದ 15 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಆಯುಕ್ತರಾದ ಹೇಮಂತ್‌ ಎಂ ನಿಂಬಾಳ್ಕರ್‌, ಅವರು ತಮ್ಮ ಸಂತಸವನ್ನು ಹಂಚಿಕೊಂಡರು.

2025ರ ಜನವರಿ 26ರಂದು ನಡೆಯುವ ದಹೆಲಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸುವ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು

  1. ಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲು (Lakkundi - The Cradle of Stone Craft)
  2. ಮೆಕ್ಕೆಕಟ್ಟು : ಮರಕೆತ್ತನೆಯ ದೈವ ನಿಧಿ (Mekkekattu – “Wood Carved Treasures of Divinity)
  3. ಕರ್ನಾಟಕದ ಸಮೃದ್ದಿಯ ಆಚರಣೆಗಳು (Rituals of Prosperity) ಮತ್ತು
  4. ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು (Karnataka “One State. Many Worlds)
    ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು. ಮೊದಲ ಸಭೆಯಲ್ಲಿಯೇ ʼಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು. ಅದಕ್ಕನುಗಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತಿವೆ ಎಂದು ನಿಂಬಾಳ್ಕರ್‌ ಅವರು ತಿಳಿಸಿದರು.

ವಿಷಯ ಆಯ್ಕೆಯ ಬಳಿಕ ಲಕ್ಕುಂಡಿಯ ಶಿಲ್ಪಕಲೆಯ ವೈಭವವನ್ನು ಅದರ ಪ್ರತಿರೂಪದಂತೆ ʼಕೆತ್ತುವʼ ಬೃಹತ್‌ ಸವಾಲು ಎದುರಾಗಿತ್ತು. ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಎತ್ತಿಹಿಡಿಯುವ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರೋತ್ಸಾಹದ ನುಡಿಗಳೇ ಈ ಸವಾಲಿನ ಕೆಲಸಕ್ಕೆ ಮುನ್ನುಡಿ ಬರೆದಿತ್ತು. ಪ್ರವಾಸೋದ್ಯಮ ಮತ್ತು ಗದುಗಿನ ಉಸ್ತುವಾರಿ ಸಚಿವರಾದ ಶ್ರೀ ಹೆಚ್.ಕೆ. ಪಾಟೀಲ್‌ ಅವರ ಮಾರ್ಗದರ್ಶನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ ಅವರ ಸಲಹೆ -ಸೂಚನೆಗಳು ಸ್ತಬ್ಧಚಿತ್ರದ ಕೆಲಸವನ್ನು ಸುಗಮವಾಗಿಸಿತ್ತು ಎಂದು ವಾರ್ತಾ ಇಲಾಖೆಯು ಆಯುಕ್ತರು ಹೇಳಿದರು.

ಗದಗದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಶರಣು ಗೋಗೇರಿ ಅವರು ಒದಗಿಸಿದ ಛಾಯಾಚಿತ್ರಗಳು ಮತ್ತು ಮಾಹಿತಿ ಸೇರಿದಂತೆ ವಿಷಯ ಪರಿಣತರು - ತಜ್ಞರು, ಕಲಾನಿರ್ದೇಶಕರು ಮತ್ತು ಕಲಾವಿದರೊಂದಿಗೆ ಪರಾಮರ್ಶಿಸಿಕೊಂಡು ಇಲಾಖೆಯು ಈ ಕೆಲಸವನ್ನು ಕೈಗೆತ್ತಿಕೊಂಡಿತ್ತು. ಹಾಕಿಕೊಂಡ ಕಾರ್ಯತಂತ್ರದ ರೂಪು ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದೆ. ಇದಕ್ಕಾಗಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕೈಜೋಡಿಸಿದ ಎಲ್ಲರನ್ನೂ ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ. ಆರಂಭದಲ್ಲಿ ದೆಹಲಿಯಲ್ಲಿ ಕವಿದಿದ್ದ ದಟ್ಟ ಮಂಜು, ಹೊಂಜು ಮತ್ತು ಮಳೆ ಎಲ್ಲವೂ ಸವಾಲುಗಳು ಕಂಡಿದ್ದವು. ಇಂದು ಅವುಗಳೆಲ್ಲವೂ ಈ ನಮ್ಮ ಸ್ತಬ್ಧಚಿತ್ರದಲ್ಲಿ ಕರಗಿ ಹೋಗಿವೆ. ಜೀವಕಳೆಯಿಂದ ಕೂಡಿರುವ ಸ್ತಬ್ಧಚಿತ್ರವನ್ನು ರಾಜ್ಯದ ಪರವಾಗಿ ಪ್ರದರ್ಶಿಸಿಸುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತದೆʼ ಎಂದು ಆಯುಕ್ತರಾದ ಹೇಮಂತ್‌ ಎಂ. ನಿಂಬಾಳ್ಕರ್‌ ಅವರು ತಮ್ಮ ಸಂತಸವನ್ನು ಹಂಚಿಕೊಂಡರು.

ವಿಷಯ ಆಯ್ಕೆಯ ಬಳಿಕ, ಸ್ತಬ್ಧಚಿತ್ರದ ಮಾದರಿ (ಕೀ ಮಾಡಲ್‍) ಮತ್ತು ಸಂಗೀತದ ಹಂತವನ್ನು ದಾಟಬೇಕಾಗಿತ್ತು. ಅಂತರರಾಷ್ಟ್ರೀಯ ಖ್ಯಾತಿಯ ಕಲಾನಿರ್ದೇಶಕ ಶ್ರೀ ಶಶಿಧರ ಅಡಪ ಅವರು ವಿನ್ಯಾಸ ಮಾಡಿಕೊಟ್ಟ ಮಾದರಿಗೆ ಆಯ್ಕೆ ಸಮಿತಿ ಮೊದಲ ಹಂತದಲ್ಲೇ ಅನುಮೋದನೆ ನೀಡಿತ್ತು. ಸಂಗೀತ ನಿರ್ದೇಶಕ ಶ್ರೀ ಪ್ರವೀಣ್‍ ಡಿ. ರಾವ್‍ ಅವರ ʼಕನ್ನಡ ಸಂಗೀತʼವನ್ನು ಹಾಗೆಯೇ ಉಳಿಸಿಕೊಂಡಿದೆ. ಮೈಸೂರು, ಬೆಂಗಳೂರು, ಗದಗ ಮತ್ತು ಧಾರವಾಡದ ಕಲಾವಿದರಿಂದ ಕೂಡಿರುವ 18 ಮಂದಿ ತಂಡವನ್ನು ಕಲಾವಿದರಾದ ಶ್ರೀ ಲಿಂಗಯ್ಯ ಅವರು ಮುನ್ನಡೆಸುತ್ತಾರೆ. ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ ಮುನ್ನಡೆಯಲಿದ್ದಾರೆ. ಇನ್ನುಳಿದ 10 ಮಂದಿ ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಕಾಣಿಸಿಕೊಳ್ಳಲಿದ್ದಾರೆ.

ಸ್ತಬ್ಥಚಿತ್ರದಲ್ಲಿ ಏನಿರಲಿದೆ: ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ 'ಶಿಲ್ಪಕಲೆಯ ತೊಟ್ಟಿಲು' ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.

ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.

ತೀವ್ರ ಪೈಪೋಟಿ: ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿಷ್ಠೆಯ ಸಂಕೇತ. ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು. ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯ 15ಕ್ಕೆ ಇಳಿಸಿದೆ. ಇದು ತೀವ್ರ ಪೈಪೋಟಿಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನದಲ್ಲಿ ಭಾಗವಹಿಸುವುದೇ ಪ್ರತಿಷ್ಠೆಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು 15 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

Tags :
#ಗಣರಾಜ್ಯೋತ್ಸವ#ನವದೆಹಲಿ#ಪರೇಡ್‌#ಲಕ್ಕುಂಡಿ#ಶಿಲ್ಪಕಲೆ
Next Article