ಗಾಂಧಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವ ಗುರಿ
ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನ
ಬೆಳಗಾವಿ: ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನ ಮುನ್ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಮಾತನಾಡಿ ರಾಮ ಭಕ್ತರಾಗಿದ್ದ, ಶುದ್ಧಆತ್ಮದ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ. ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ.
ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ. ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದರು.