For the best experience, open
https://m.samyuktakarnataka.in
on your mobile browser.

ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿವೆ

04:08 PM Oct 29, 2024 IST | Samyukta Karnataka
ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿವೆ

ಒಳ ಮೀಸಲಾತಿ ವರದಿ ಬರುವವರೆಗೂ ಸರ್ಕಾರಿ ನೇಮಕಾತಿಗಳಿಗೆ ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಲ್ಲ

ಬೆಂಗಳೂರು: 3 ತಿಂಗಳ ಒಳಗೆ ಒಳಮೀಸಲಾತಿ ಜಾರಿಗೆ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ.
ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದ್ದು, ವರದಿ ಸಲ್ಲಿಕೆಯಾಗುವವರೆಗೆ ರಾಜ್ಯ ಸಿವಿಲ್‌ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ವಿಚಾರವನ್ನು ನಿನ್ನೆಯ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ಆದಾಗ್ಯೂ, ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿದೆ. ಹೊಸ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಸೀಮಿತವಾಗಿ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ಕಾರವು ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ.

Tags :