ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಲಜೀವನ್ ಮಿಷನ್ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಿ

07:28 PM Nov 30, 2024 IST | Samyukta Karnataka

ಸಮರ್ಪಕ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ ನೀರಿನ ಸಮಸ್ಯೆಯನ್ನು ಹೋಗಲಾಡಿಸುವ ಉದ್ದೇಶದಿಂದ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿ ಮಾಡಿದೆ

ಚಿಕ್ಕಮಗಳೂರು: ಜಲಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಿ. ಶೀಘ್ರವಾಗಿ ಸಾರ್ವಜನಿಕರಿಗೆ ಉತ್ತಮ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ವ್ಯಾಪ್ತಿಯ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ಹರ್ ಘರ್ ಜಲ್ ಎಂಬ ಘೋಷಣೆಯೊಂದಿಗೆ ದೇಶದ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೆ ಟ್ಯಾಪ್ ಸಂಪರ್ಕಗಳ ಮೂಲಕ ಸುರಕ್ಷಿತ ಹಾಗೂ ಸಮರ್ಪಕ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ ನೀರಿನ ಸಮಸ್ಯೆಯನ್ನು ಹೋಗಲಾಡಿಸುವ ಉದ್ದೇಶದಿಂದ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯ ಕಾಮಗಾರಿಯನ್ನು ಪ್ರದೇಶಕ್ಕೆ ತಕ್ಕಂತೆ ವೈಜ್ಞಾನಿಕವಾಗಿ ಯೋಜನೆ ಸಿದ್ದಪಡಿಸಿ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರತಿಯೊಂದು ಮನೆಗೆ ನೀರು ಒದಗಿಸಲು ಕ್ರಮವಹಿಸಿ ಎಂದು ತಿಳಿಸಿದರು.
ಕಾಮಗಾರಿಗೆ ಬಳಸುವ ಪೈಪ್, ಟ್ಯಾಪ್, ಮೀಟರ್‌ಗಳು ಹಾಗೂ ಇನ್ನಿತರ ವಸ್ತುಗಳ ಗುಣಮಟ್ಟವನ್ನು ಪರಿಶೀಲಿಸಿ ನಂತರ ಅಳವಡಿಸಬೇಕು. ಕಾಮಗಾರಿ ಸಂಬಂಧ ರಸ್ತೆಗಳನ್ನು ಕತ್ತರಿಸುವ ಸಂದರ್ಭವಿದ್ದಲ್ಲಿ ಬ್ಲೇಡ್ ಮೂಲಕ ಕತ್ತರಿಸಿ ರಸ್ತೆಗಳಿಗೆ ಯಾವುದೇ ಹಾನಿಯಾಗದಂತೆ ಗಮನಹರಿಸಬೇಕು. ಪ್ರಥಮವಾಗಿ ಗ್ರಾಮದಲ್ಲಿ ನೀರಿನ ಮೂಲಗಳನ್ನು ಗುರುತಿಸಿ ನಂತರ ಕಾಮಗಾರಿಯನ್ನು ಪ್ರಾರಂಭಿಸಬೇಕು. ಕಾಮಗಾರಿ ಪೂರ್ಣಗೊಂಡ ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಸ್ತಾಂತರಿಸಬೇಕು ಹಾಗೂ ಕಳಪೆ ಕಾಮಗಾರಿ ನಿರ್ವಹಿಸುವ ಕಂಟ್ರಾಕ್ಟರ್ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದ ಅವರು ಜನರಿಗೆ ಶುದ್ಧ ನೀರನ್ನು ಒದಗಿಸಲು ಕ್ರಮವಹಿಸಿ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್ ಕೀರ್ತನಾ ಮಾತನಾಡಿ ಜಿಲ್ಲೆಯ ೨೨೬ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ೧೦೦೬ ಗ್ರಾಮಗಳಿವೆ ಇವುಗಳಲ್ಲಿ ಸುಮಾರು ೩,೭೨೯ ಜನವಸತಿಯಿದ್ದು ಒಟ್ಟು ೨,೪೦,೩೦೭ ಕುಟುಂಬಗಳಿವೆ. ಇವುಗಳಲ್ಲಿ ೬೬,೪೦೩ ವೈಯಕ್ತಿಕ ನಳ ಸಂಪರ್ಕ ಹೊಂದಿದ್ದ ಕುಟುಂಬಗಳಿದ್ದು ಈವರೆಗೆ ೧,೨೯,೫೪೯ ಕುಟುಂಬಗಳಿಗೆ ಸಂಪರ್ಕ ಕಲ್ಪಿಸಲಾಗಿದೆ ಹಾಗೂ ೪೪,೩೫೫ ಕುಟುಂಬಗಳಿಗೆ ಯೋಜನೆಯಡಿಯಲ್ಲಿ ಶೀಘ್ರವಾಗಿ ವೈಯಕ್ತಿಕ ನಳ ಸಂಪರ್ಕ ಕಲ್ಪಿಸಿಕೊಡಲಾಗುವುದು ಎಂದರು.
ಜಿಲ್ಲಾದ್ಯಂತ ಬ್ಯಾಚ್-೧ ರಲ್ಲಿ ೨೫೧ ಕಾಮಗಾರಿಗಳಿಗೆ ಅನುಮೋದನೆಗೊಂಡಿದ್ದು, ಇವುಗಳಲ್ಲಿ ೨೩೬ ಪೂರ್ಣಗೊಂಡಿದೆ ಹಾಗೂ ೧೫ ಕಾಮಗಾರಿಗಳು ಪ್ರಗತಿಯಲ್ಲಿವೆ. ಬ್ಯಾಚ್-೨ ರಲ್ಲಿ ೨೭೫ ಕಾಮಗಾರಿಗಳಲ್ಲಿ ೧೮೨ ಕಾಮಗಾರಿಗಳು ಪೂರ್ಣಗೊಂಡಿವೆ ಮತ್ತು ೯೩ ಕಾಮಗಾರಿಗಳು ಪ್ರತಿಯಲ್ಲಿದೆ. ಬ್ಯಾಚ್-೩ ರಲ್ಲಿ ೧೨೯ ಕಾಮಗಾರಿಗಳಿಗೆ ಅನುಮೋದನೆಯಾಗಿದ್ದು, ಇವುಗಳಲ್ಲಿ ೧೦೬ ಕಾಮಗಾರಿಗಳು ಪೂರ್ಣಗೊಂಡಿವೆ ಹಾಗೂ ೨೩ ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ ಮತ್ತು ಬ್ಯಾಚ್-೪ ರಲ್ಲಿ ಒಟ್ಟು ೧೧೩೦ ಕಾಮಗಾರಿಗಳಿಗೆ ಅನುಮೋದನೆ ಪಡೆದಿದ್ದು, ೩೨೨ ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನು ೫೮೭ ಕಾಮಗಾರಿಗಳು ಪ್ರಗತಿಯಲ್ಲಿದೆ. ಜಿಲ್ಲೆಯಾದ್ಯಂತ ಪ್ರಗತಿಯಲ್ಲಿರುವ ಒಟ್ಟು ೭೧೮ ಜಲಜೀವನ್ ಮಿಷನ್ ಕಾಮಗಾರಿಗಳನ್ನು ಹಂತ ಹಂತವಾಗಿ ಶೀಘ್ರದಲ್ಲೆ ಪೂರ್ಣಗೊಳಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು ಎಂದ ಅವರು ರಸ್ತೆಯನ್ನು ಬ್ಲೇಡ್ ಮೂಲಕ ಕತ್ತರಿಸಿ ನಂತರ ಅವುಗಳನ್ನು ದುರಸ್ತಿಗೊಳಿಸಲಾಗುತ್ತಿದೆ ಹಾಗೂ ಕಾಮಗಾರಿಯನ್ನು ವೈಜ್ಞಾನಿಕ ಮತ್ತು ವ್ಯವಸ್ಥಿತವಾಗಿ ಗುಣಮಟ್ಟದಿಂದ ಪೂರ್ಣಗೊಳಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಖಾರಿ, ಶಿವಕುಮಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಚಿದಾನಂದ ಹಾಗೂ ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Next Article