ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಗಂಭೀರ ಆರೋಪ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕುಮಾರಸ್ವಾಮಿ ಸಂಸದ ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ, ಅಪರಾಧ ಸಾಬೀತಾದರೆ ನಂತರ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು. ಪ್ರಕರಣದ ಹಿಂದೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಕುಟುಂಬಕ್ಕೆ ಕಳಂಕ ತರುವಂತೆ ಮಾಡಬೇಕೆಂಬ ಹುನ್ನಾರವಿದೆ. ಹಳೆಯ ಪ್ರಕರಣವನ್ನು ಈಗ ಚುನಾವಣೆ ಸಮಯದಲ್ಲಿ ಮುನ್ನೆಲೆಗೆ ತಂದಿದ್ದಾರೆ. ಈ ಪ್ರಕರಣಕ್ಕೂ ಪ್ರಧಾನಿ ಮೋದಿ ಅವರಿಗೂ ಕಾಂಗ್ರೆಸ್ ನಾಯಕರು ತಳಕು ಹಾಕಿದ್ದಾರೆ. ಇದಕ್ಕೂ ಮೋದಿಗೂ ಏನು ಬಂಧ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇನ್ನು ಮಾಜಿ ಸಚಿವ ಜಿ.ಟಿ. ದೇವೇಗೌಡ ಮಾತನಾಡಿ ಪ್ರಜ್ವಲ್ ರೇವಣ್ಣ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಸ್‌ಐಟಿಗೆ ತನಿಖಾ ಹೊಣೆ ನೀಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರಿಂದ ಮಹಿಳೆಯರಿಗೆ ಸಾಕಷ್ಟು ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.