ಜ್ಞಾನ ದೇಗುಲವಿದು ಘೋಷವಾಕ್ಯ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಹೆಚ್ಸಿ ಮಹದೇವಪ್ಪ
ಬೆಂಗಳೂರು: ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಹೆಚ್. ಸಿ. ಮಹದೇವಪ್ಪ ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ ಮಾಡಿದ್ದಾರೆ.
ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ. ಆದರೆ ಸೃಜನಾತ್ಮಕ ಕಲಿಕೆಯ ದೃಷ್ಟಿಯಿಂದ, ಮಕ್ಕಳಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ಮೂಡಿಸಿ ಅವರಲ್ಲಿ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಅಧಿಕಾರಿಗಳು ಸಾಮಾಜಿಕ ಜಾಲತಾಣದ ಗುಂಪಿನಲ್ಲಿ ಚರ್ಚೆಯನ್ನು ನಡೆಸಿದ್ದು, ಜ್ಞಾನ ದೇಗುಲವಿದು - ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ? ಎಂದು ಆಲೋಚಿಸಿರುತ್ತಾರೆ, ಉತ್ತಮ ಆಲೋಚನೆಯನ್ನು ಹೊಂದಿದ ಈ ಸಾಲನ್ನು ಕೆಲವರು ಶಾಲೆಗಳಲ್ಲೂ ಬಳಸಿರುತ್ತಾರೆ. ಅಂದಹಾಗೆ ಜ್ಞಾನ ದೇಗುಲವಿದು - ಧೈರ್ಯವಾಗಿ ಪ್ರಶ್ನಿಸಿ ಎಂದರೆ ಅದು ಕುವೆಂಪು ಅವರು ಹೇಳುವ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯವೇ ಆಗಿದ್ದು ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದವು ಇಲ್ಲಿ ಜರುಗಿರುವುದಿಲ್ಲ. ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯವನ್ನು ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದಿದ್ದಾರೆ.