For the best experience, open
https://m.samyuktakarnataka.in
on your mobile browser.

ಟಿಬಿ ಡ್ಯಾಂಗೆ ಸಮತೋಲನ ಜಲಾಶಯ

02:02 AM Feb 17, 2024 IST | Samyukta Karnataka
ಟಿಬಿ ಡ್ಯಾಂಗೆ ಸಮತೋಲನ ಜಲಾಶಯ

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಯೋಜನೆಯ ಎಲ್ಲಾ ಲಿಫ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲಾಗುವುದರ ಜೊತೆ ಸಮತೋಲನಾ ಜಲಾಶಯದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-೩ ಯೋಜನೆಯಡಿಯ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ ಮತ್ತು ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು.
ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಜಲಾಶಯ ವ್ಯಾಪ್ತಿಯಲ್ಲಿನ ರೈತರ ಬಹುದಿನದ ಬೇಡಿಕೆಯಾದ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ ೧೫,೬೦೦ ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧವಾಗಿದ್ದು, ಸದರಿ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆ ಚಾಲನೆಗೊಳಿಸಿದ್ದು, ಯೋಜನೆ ಕಾರ್ಯಗತಗೊಳಿಸಲು ಆದ್ಯತೆ ನೀಡಲಾಗುವುದು.
ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಿಸುವ ಯೋಜನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಮಾಲೀಕತ್ವವಿರುವ ಜಮೀನಿನಲ್ಲಿ ಮತ್ತು ಜಲಾಶಯಗಳ ಹಿನ್ನೀರಿನಲ್ಲಿ ಪಿಪಿಪಿ ಅಡಿ ಸೋಲಾರ್ ಪಾರ್ಕ್ಗಳ ಸ್ಥಾಪನೆ. ಪ್ರಗತಿಯಲ್ಲಿರುವ ಏತ ನೀರಾವರಿ ಯೋಜನೆಗಳಾದ ಬೂದಿಹಾಳ್-ಪೀರಾಪುರ ಹಂತ-೧, ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡ, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಮತ್ತು ಗುರುಮಿಠಕಲ್ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆ ಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕಾಗಿ ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ ೨ ಉಪ ವಿಭಾಗಗಳನ್ನು ಸ್ಥಾಪಿಸಲಾಗಿದೆ. ಯೋಜನೆಯಡಿ ಮುಳುಗಡೆಯಾಗುವ ಭೂಮಿಯನ್ನು ಗುರುತಿಸುವ ಸರ್ವೆ ಹಾಗೂ ಮರಗಳ ಎಣಿಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಿದ್ದು ಉಳಿದ ಅಗತ್ಯ ತೀರುವಳಿಗಳನ್ನು ಸಕ್ಷಮ ಪ್ರಾಧಿಕಾರಗಳಿಂದ ಪಡೆದು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು ಎಂದು ಸರಕಾರ ಭರವಸೆ ನೀಡಿದೆ.
ವಿಶ್ವೇಶ್ವರಯ್ಯ ನಾಲಾ ಜಾಲದ ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲ್ಲೂಕಿನ ಮಾದವಮಂತ್ರಿ ನಾಲೆಗಳ ಹಾಗೂ ಮದ್ದೂರು ತಾಲ್ಲೂಕು ಕೆಮ್ಮಣ್ಣುನಾಲಾ ಆಧುನೀಕರಣ, ಹುಣಸೂರು ತಾಲ್ಲೂಕಿನ ಮರದೂರು, ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆಗಳು, ಶ್ರೀರಂಗ ಕುಡಿಯುವ ನೀರು ಯೋಜನೆಗೆ ಪೈಪದ ಲೈನ್ ಮೂಲಕ ನೀರು ಒದಗಿಸುವ ಯೋಜನೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ, ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ, ರಾಮನಗರದ ಬಳಿ ಅರ್ಕಾವತಿ ರಿವರ್ ಫ್ರಂಟ್ ಡೆವಲಪ್‌ಮೆಂಟ್ ಯೋಜನೆಗಳಿಗೆ ೨,೦೦೦ ಕೋಟಿ ರೂ. ನೀಡಲಾಗಿದೆ.