ಕನ್ನಡ ಅನುಷ್ಠಾನ ವರದಿಗೆ ಮಾ. ೧೨ ಗಡುವು
ಬೆಂಗಳೂರು: ರಾಜ್ಯದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಸಂಬಂಧ ಖುದ್ದು ಜಿಲ್ಲಾಧಿಕಾರಿಗಳು ವಿಧಾನಸಭಾ ಕ್ಷೇತ್ರವಾರು ಭೇಟಿ ನೀಡಿ, ನಾಮಫಲಕ ಅಳವಡಿಕೆ ಪ್ರಗತಿ ಕುರಿತು ಮಾ. ೧೨ರಂದು ವರದಿ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಸೂಚನೆ ನೀಡಿದ್ದಾರೆ.
ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ವಿಧೇಯಕ ೨೦೨೪ಕ್ಕೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಗುರುವಾರ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ವಿಧೇಯಕದಲ್ಲಿನ ಅಂಶಗಳ ಕಟ್ಟುನಿಟ್ಟಿನ ಅನುಷ್ಠಾನ ಕುರಿತಂತೆ ಹಲವು ನಿರ್ದೇಶನಗಳನ್ನು ನೀಡಿದರು.
ನೂತನ ವಿಧೇಯಕದ ಅನ್ವಯ ವಾಣಿಜ್ಯ ಉದ್ದಿಮೆಗಳ ನಾಮಫಲಕದಲ್ಲಿ ಶೇ. ೬೦ರಷ್ಟು ಕನ್ನಡ ಭಾಷೆ ಇರಲೇಬೇಕು. ಅದಕ್ಕೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆಗಳಲ್ಲಿನ ಪ್ರಗತಿ ಕುರಿತಂತೆ ಖುದ್ದು ಜಿಲ್ಲಾಧಿಕಾರಿಗಳೇ ಪರಿಶೀಲನೆ ನಡೆಸಬೇಕು. ನಿಮ್ಮ ಜಿಲ್ಲೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಪ್ರಗತಿಯನ್ನು ಅವಲೋಕಿಸಬೇಕು. ಮಾ. ೧೨ರೊಳಗೆ ಪರಿಶೀಲನೆ ನಡೆಸಿ, ವಿಧೇಯಕ ಅನುಷ್ಠಾನದ ಕುರಿತು ವರದಿ ನೀಡಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಉಪ ವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು. ಗಡಿ ಜಿಲ್ಲೆಗಳಾದ ಬೆಳಗಾವಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ದಕ್ಷಿಣ ಕನ್ನಡಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಚಿವರು ತಾಕೀತು ಮಾಡಿದರು.
ಗಡಿಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆಗಳು ಹೆಚ್ಚಾಗಿ ಪ್ರತಿಭಟನೆ ನಡೆಸುತ್ತಿದ್ದು, ಅದನ್ನು ನಿಯಂತ್ರಿಸಲು ಕನ್ನಡ ನಾಮಫಲಕ ಅಳವಡಿಕೆ ಶೇ. ೧೦೦ರಷ್ಟು ಆಗಬೇಕು. ಖಾನಾಪುರ, ನಿಪ್ಪಾಣಿ, ಚಿಕ್ಕೋಡಿಯಂತಹ ತಾಲೂಕುಗಳಲ್ಲಿ ಮರಾಠಿ ನಾಮಫಲಕ ಅಳವಡಿಕೆಯ ದೂರುಗಳಿದ್ದು, ಅವುಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕ ಅಳವಡಿಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕನ್ನಡ ನಾಮಫಲಕ ಅಳವಡಿಸದಿದ್ದರೆ ಉದ್ದಿಮೆ ಪರವಾನಗಿ ರದ್ದು ಸೇರಿದಂತೆ ದುಬಾರಿ ದಂಡ ವಿಧಿಸಲಾಗುವುದು ಎಂಬ ಎಚ್ಚರಿಕೆಯನ್ನು ಉದ್ದಿಮೆದಾರರಿಗೆ ನೀಡಬೇಕು ಎಂದು ಸೂಚಿಸಿದರು.