For the best experience, open
https://m.samyuktakarnataka.in
on your mobile browser.

ದೆಹಲಿಯಲ್ಲಿ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ

04:08 PM Nov 21, 2024 IST | Samyukta Karnataka
ದೆಹಲಿಯಲ್ಲಿ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ

ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಆಯೋಜಿಸಿದ್ದ ನಂದಿನಿ ವಿವಿಧ ಶ್ರೇಣಿಯ ಹಾಲಿನ ಪ್ಯಾಕೆಟ್‌ಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟಗಳು ಸೇರಿಕೊಂಡು ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ದೆಹಲಿಯ ನಿವಾಸಿಗಳಿಂದ ನಂದಿನಿ ಉತ್ಪನ್ನಗಳಿಗೆ ಅತ್ಯುತ್ತಮ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್‌ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ನಾನೂ ಕೂಡ ಪಶುಸಂಗೋಪನಾ ಸಚಿವನಾಗಿದ್ದೆ, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ. ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಿದ್ದೆ. ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಿದ್ದೆ. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ. ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್‌ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್‌ಗೆ ಏರಿಸುವ ಗುರಿ ನಮ್ಮದಾಗಿದೆ ಎಂದರು.

Tags :