ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಮಿತ್‌ ಶಾ ಭೇಟಿ ಮಾಡಿ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಿದ್ದರಾಮಯ್ಯ

04:05 PM Dec 20, 2023 IST | Samyukta Karnataka

ನವದೆಹಲಿ: ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ, ಪ್ರಕೃತಿ ವಿಕೋಪ ಕುರಿತಂತೆ ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಒತ್ತಾಯಿಸಿದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು, ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,18,177 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್‌ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್‌ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡುತ್ತೇನೆ. ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದಿದ್ದಾರೆ.

Next Article