For the best experience, open
https://m.samyuktakarnataka.in
on your mobile browser.

ಪಂಚಮಸಾಲಿ ಹೋರಾಟ ಹತ್ತಿಕ್ಕುವ ಪ್ರಯತ್ನ

09:54 PM Oct 14, 2024 IST | Samyukta Karnataka
ಪಂಚಮಸಾಲಿ ಹೋರಾಟ ಹತ್ತಿಕ್ಕುವ ಪ್ರಯತ್ನ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗೆ ಒತ್ತಾಯಿಸಿ ಅ. ೧೮ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿಗಳು ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗಾಗಿ ೭ನೇ ಹಂತದ ಹೋರಾಟವಾಗಿ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ವಕೀಲರ ಸಮಾವೇಶದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅ. ೧೫ರಂದು ಸಭೆ ನಡೆಸುವುದಾಗಿ ಭರವಸೆ ಕೊಟ್ಟಿದ್ದರು. ಆದರೆ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಸಿದ್ದರಾಮಯ್ಯನವರ ನಡೆ ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಸವದತ್ತಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳಿಗೆ ನಮ್ಮ ಮನವಿ ಕುರಿತು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಆದರೀಗ ದೆಹಲಿ ಪ್ರವಾಸದ ಹಿನ್ನೆಲೆಯಲ್ಲಿ ಇಲ್ಲಿಯವರೆಗೂ ಬೇರೆ ದಿನಾಂಕ, ಸ್ಥಳ ಮತ್ತು ಸಮಯ ನಿಗದಿಪಡಿಸದೇ ಇರುವುದು, ಪಂಚಮಸಾಲಿ ವಕೀಲರ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆದಿದೆ ಎಂಬ ಅನುಮಾನ ಮೂಡತೊಡಗಿದೆ ಎಂದರು.
ಪಂಚಮಸಾಲಿ ಸಮಾಜದ ವಕೀಲರು, ಹೋರಾಟಗಾರರು ಅ. ೧೮ರಂದು ಬೆಂಗಳೂರಿಗೆ ಹೋಗಿ ವಿಧಾನಸೌಧದ ಮುಂಭಾಗದಲ್ಲಿ ಕುಳಿತು ಪ್ರತಿಭಟನಾರ್ಥವಾಗಿ ಮುಖ್ಯಮಂತ್ರಿಗಳ ಗಮನಸೆಳೆಯುತ್ತೇವೆ. ಆ ದಿನವೂ ಕೂಡ ಸ್ಪಂದನೆ ದೊರೆಯದಿದ್ದರೇ, ಮುಂದಿನ ಅಲ್ಲಿಯೇ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಸಚಿವರು-ಶಾಸಕರ ಬಾಯಿಗೆ ಬೀಗ
ಹೋರಾಟ ನಡೆಯುತ್ತಿದ್ದರೂ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಮಾಜದ ಶಾಸಕರು, ಸಚಿವರು ತುಟಿ ಬಿಚ್ಚದೆ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈಗ ಅಧಿಕಾರ ಇದ್ದರೂ ಮೀಸಲಾತಿ ಬಗ್ಗೆ ಮಾತನಾಡುತ್ತಿಲ್ಲ. ಬಹುಶಃ ಅವರಿಗೆ ಮಾಜಿ ಆದ ಬಳಿಕ ಅದರ ಬೆಲೆ ಗೊತ್ತಾಗುತ್ತದೆ ಎಂದು ಸಮಾಜದ ರಾಜಕೀಯ ನಾಯಕರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

Tags :