For the best experience, open
https://m.samyuktakarnataka.in
on your mobile browser.

ಪತ್ರಿಕೋದ್ಯಮ: ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ…?

08:00 PM Oct 02, 2024 IST | Samyukta Karnataka
ಪತ್ರಿಕೋದ್ಯಮ  ಅವರು ಹಿಂಗೆ ಹೇಳಿದ್ರು  ನೀವೇನು ಹೇಳ್ತೀರಾ…

ಬೆಂಗಳೂರು: ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?" ಅಂತ ಮುಖಕ್ಕೆ ಮೈಕ್ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿಯಲ್ಲಿ ಪಾಲ್ಗೊಂಡು, ಪತ್ರಿಕೋದ್ಯಮ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿ ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮವೆನಿಸುತ್ತದೆಯೇ? ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾಗಿದೆಯಾ? "ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?" ಅಂತ ಮುಖಕ್ಕೆ ಮೈಕ್ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ‌ ನನಗಂತೂ ಅರ್ಥವಾಗುತ್ತಿಲ್ಲ. ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳುವುದಿಲ್ಲ. ನಾನು ಮೊದಲ ಬಾರಿ ಮುಖ್ಯಮಂತ್ರಿ ಆದ ಬಳಿಕ 2014 ರಲ್ಲಿ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು ಆರಂಭಿಸಿದೆ. ಗಾಂಧಿ ತತ್ವಗಳನ್ನು ಅನುಸರಿಸುತ್ತಾ, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಕಲಿಸುತ್ತಿರುವ ಅತ್ಯಂತ ಅರ್ಹರು ಈ ಬಾರಿಯ ಗಾಂಧಿ ಸೇವಾ ಪ್ರಶಸ್ತಿ ಪಡೆದಿದ್ದಾರೆ. ಪ್ರಶಸ್ತಿ ವಿತರಿಸಲು ಹೆಮ್ಮೆಯೆನಿಸುತ್ತಿದೆ. ಟೀಯೆಸ್ಸಾರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತರು ಇವತ್ತಿನ ಪತ್ರಕರ್ತರಿಗೆ ಮಾದರಿ ಆಗಬೇಕು ಎಂದು ಆಶಿಸುತ್ತೇನೆ. ಶಿಕ್ಷಣ ಪಡೆದವರೆಲ್ಲಾ ಮಾನವೀಯತೆ ಇರುವವರು ಎಂದು ಹೇಳಲಾಗುವುದಿಲ್ಲ. ಶಿಕ್ಷಣ ಮನುಷ್ಯರನ್ನು ಮಾನವೀಯಗೊಳಿಸಬೇಕು. ಇಲ್ಲದಿದ್ದರೆ ಅಂತಹ ಶಿಕ್ಷಣಕ್ಕೆ ಮೌಲ್ಯ ಇರುವುದಿಲ್ಲ. ಶಿಕ್ಚಣ ಪಡೆದವರು ಸಮಾಜದ ಆಸ್ತಿ ಆಗಬೇಕು. ಸಮಾಜದ ವಿರೋಧಿ ಆಗಬಾರದು. ಗಾಂಧೀಜಿ ಅವರ ಬದುಕೇ ಸಂದೇಶವಾಗಿತ್ತು. ಸಮಾಜದ ಬದಲಾವಣೆಗಾಗಿ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಹೀಗಾಗಿ ಇವರ ವಿಚಾರಗಳು ಎಂದೆಂದಿಗೂ ಶಾಶ್ವತ. ಗೋಡ್ಸೆಗಳನ್ನು ನಾವು ಸಹಿಸಬಾರದು. ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ನಾವು ಸೋಲಿಸಬೇಕಿದೆ. ಗಾಂಧಿಯವರನ್ನು ದೈಹಿಕವಾಗಿ ಕೊಲ್ಲಬಹುದು. ಆದರೆ ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ. ನಾವು ಗೋಡ್ಸೆ ಭಾರತವನ್ನು ನಿರ್ಮಿಸಲು ಹೊರಟಿರುವವರನ್ನು ಸೋಲಿಸಬೇಕು. ನಾವು ಗಾಂಧಿ ಭಾರತವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದರು.

Tags :