ಪ್ರಜ್ವಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣವೂ ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಆರೋಪಿತರಾಗಿ ಮೂರು ತಿಂಗಳಿನಿದಲೂ ಕಾರಾಗೃಹವಾಸ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಪ್ರಧಾನ ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನನ್ನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ವಾರ-ಪ್ರತಿವಾದಗಳು ಗುರುವಾರ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಪೀಠ, ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತು.
ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಪ್ರಜ್ವಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು, ರಾಜಕೀಯ ದುರುದ್ದೇಶದಿಂದ ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ನಡೆದ ಬಹುವರ್ಷಗಳ ಬಳಿಕ ಚುನಾವಣೆಯ ಹೊತ್ತಿನಲ್ಲಿ ದೂರುದ್ದೇಶದಿಂದ ದೂರು ದಾಖಲಿಸಲಾಗಿದೆ. ಈಗಾಗಲೇ ಮೂರು ತಿಂಗಳು ಜೈಲುವಾಸ ಅನುಭವಿಸಿರುವ ಪ್ರಜ್ವಲ್ ಅವರಿಗೆ ಜಾಮೀನು ನೀಡಬೇಕೆಂದು ಮನವಿ ಮಾಡಿದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿಐಡಿಯ ವಿಶೇಷ ತನಿಖಾ ತಂಡದ ಪರ ವಕೀಲ ಪ್ರೊ. ರವಿವರ್ಮಕುಮಾರ್, ರಾಜಕೀಯ ಕುಟುಂಬದಿಂದ ಬಂದಿರುವ ಪ್ರಜ್ವಲ್ ರೇವಣ್ಣ ಪ್ರಭಾವಿಯಾಗಿದ್ದು ಅಮಾಯಕ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆ. ಈ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯ ನಾಶದ ಸಾಧ್ಯತೆಗಳಿದ್ದು ಜಾಮೀನು ಅರ್ಜಿಯನ್ನು ತಿರಸ್ಕರಿಸಬೇಕೆಂದು ಕೋರಿದರು. ಈ ವಾದ-ಪ್ರತಿವಾದದ ಬಳಿಕ ನ್ಯಾಯಪೀಠ ತೀರ್ಪು ಕಾಯ್ದಿರಿಸಿ ವಿಚಾರಣೆಯನ್ನು ಮುಂದೂಡಿತು.