ಪ್ರವಾಹ ಪೀಡಿತ ಗ್ರಾಮಗಳಿಗೆ ಸಿಎಂ ಭೇಟಿ, ಪರಿಶೀಲನೆ
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಗಳಾದ ಅಂಕಲಿ-ಮಾಂಜರಿ, ಜುಗುಳ ಗ್ರಾಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು.
ಸಚಿವ ಸತೀಶ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ, ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹಾಗೂ ಶಾಸಕರಾದ ರಾಜು ಕಾಗೆ ಹಾಗೂ ಲಕ್ಷ್ಮಣ ಸವದಿ ಮತ್ತು ರಾಜು ಶೇಠ ಸಾಥ ನೀಡಿದರು. ಪ್ರವಾಹ ಪೀಡಿತ ಗ್ರಾಮಗಳಿಗೆ ಕೂಡಲೇ ಪರಿಹಾರ ನೀಡುವಂತೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಮೊಹ್ಮದ ರೋಶನ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಹರಿದು ಬರುವ ನೀರಿನಷ್ಟು ಆಲಮಟ್ಟಿ ಡ್ಯಾಮದಿಂದ ಅಷ್ಟೇ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಪ್ರವಾಹ ಪೀಡಿತ ಗ್ರಾಮಗಳಲ್ಲಿನ ತೋಟಪಟ್ಟಿ ಜನರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ. 3 ಲಕ್ಷಕಿಂತ ಹೆಚ್ಚು ಕ್ಯೂಸೆಕ್‌ನಷ್ಟು ನೀರಿನ ಪ್ರಮಾಣ ಹೆಚ್ಚಾದಲ್ಲಿ ಗ್ರಾಮಗಳಲ್ಲಿ ಭೀತಿ ಹೆಚ್ಚಾಗುತ್ತದೆ ಎಂದು ಮಾಹಿತಿ ನೀಡಿದರು.