ಬಸವ ಜಯಂತಿ, ಸರಣಿ ರಜೆ: ಹೆಚ್ಚುವರಿ ಬಸ್ ವ್ಯವಸ್ಥೆ
ಹುಬ್ಬಳ್ಳಿ: ಬಸವ ಜಯಂತಿ ಹಾಗೂ ಸರಣಿ ರಜೆ, ಮದುವೆ, ಮತ್ತಿತರ ಶುಭ ಕಾರ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಮೇ 10ರಿಂದ 12ರವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಮೇ 10ರಂದು ಶುಕ್ರವಾರ ಬಸವ ಜಯಂತಿ ಹಾಗೂ ಅಕ್ಷಯ ತೃತೀಯ, 11ರಂದು ಎರಡನೇ ಶನಿವಾರ ಹಾಗೂ 12ರಂದು ರವಿವಾರ ಸಾರ್ವಜನಿಕ ರಜೆ ಇರುತ್ತದೆ. ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮದುವೆ, ಗೃಹ ಪ್ರವೇಶ ಮತ್ತಿತರ ಶುಭಕಾರ್ಯಗಳು ನಡೆಯಲಿವೆ. ಆದ್ದರಿಂದ ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ. ಅವರ ಅನುಕೂಲಕ್ಕಾಗಿ ಮೇ 10ರಿಂದ 12ರವರೆಗೆ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಸಹ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
ಅದೇ ರೀತಿ ರಜೆ ಮುಗಿಸಿಕೊಂಡು ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಮೇ 12ರಂದು ರವಿವಾರ ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಓಡಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮುಂಗಡ ಬುಕಿಂಗ್‌ಗೆ ರಿಯಾಯಿತಿ
https://www.ksrtc.in ಅಥವಾ KSRTC Mobile App ಹಾಗೂ ಬಸ್ ನಿಲ್ದಾಣಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಒಂದೇ ಟಿಕೆಟ್‌ನಲ್ಲಿ ನಾಲ್ಕು ಅಥವಾ ಹೆಚ್ಚಿನ ಸೀಟುಗಳನ್ನು ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇಕಡಾ 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.