For the best experience, open
https://m.samyuktakarnataka.in
on your mobile browser.

ಬಸ್ ಸಂಚಾರ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳಿಂದ ರಸ್ತೆ ತಡೆ

04:41 PM Nov 20, 2023 IST | Samyukta Karnataka
ಬಸ್ ಸಂಚಾರ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳಿಂದ ರಸ್ತೆ ತಡೆ

ಶ್ರೀರಂಗಪಟ್ಟಣ : ಸಕಾಲದಲ್ಲಿ ಬಸ್ ಬಾರದ ಶಾಲಾ- ಕಾಲೇಜಿಗೆ ತೆರಳಲು ತೊಂದರೆಯಾಗುತ್ತಿದ್ದು, ಸೂಕ್ತ ಬಸ್ ಸಂಚಾರ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಾಲೂಕಿನ ಕೊಡಿಯಾಲ ಗ್ರಾಮದಲ್ಲಿ ರಸ್ತೆ ತಡೆ ನಡೆಸಿದರು.
ಸರ್ಕಾರಿ ಬಸ್‌ಗಳ ಸಂಚಾರಕ್ಕೆ ಅಡ್ಡಿಪಡಿಸಿ, ಜನಪ್ರತಿನಿಧಿಗಳು ಮತ್ತು ಸಾರಿಗೆ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು
ಕೊಡಿಯಾಲ ಸೇರಿ ಸುತ್ತಮುತ್ತಲ ಗ್ರಾಮದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲು ಕೆಎಸ್ ಆರ್ ಟಿ ಸಿ ಬಸ್ ನಲ್ಲಿ ಪ್ರತಿನಿತ್ಯ ಪ್ರಯಾಣ ಮಾಡುತ್ತಾರೆ. ಆದರೆ ಸಕಾಲದಲ್ಲಿ ಬಸ್ ಗಳು ಬಾರದ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಶಾಲೆಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.
ಬಸ್‌ಗಳು ಬಂದರೂ ಸಹ ವಿದ್ಯಾರ್ಥಿಗಳು ಮತ್ತು ಇತರೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಮುಂದಾಗುತ್ತಿಲ್ಲ. ವಿದ್ಯಾರ್ಥಿಗಳ ಜೊತೆ ನಿರ್ವಾಹಕರು ಉಡಾಫೆಯಾಗಿ ವರ್ತಿಸುತ್ತಾರೆ. ನಿಲ್ದಾಣಗಳಲ್ಲಿ ನಿಲುಗಡೆ ಮಾಡದೆ ಸ್ವಲ್ಪ ದೂರ ಮುಂದೆ ಹೋಗಿ ಬಸ್ ಅನ್ನು ನಿಲ್ಲಿಸುತ್ತಾರೆ. ಅಲ್ಲದೆ ಬಸ್ ಗಳಲ್ಲಿ ಪ್ರಯಾಣಿಕರು ತುಂಬಿದ್ದಾರೆ ಎಂದು ನಿಲ್ಲಿಸದೆ ಹೋಗುತ್ತಾರೆ ಎಂದು ಅಳಲು ತೋಡಿಕೊಂಡರು. ಈ ವೇಳೆ ಪೊಲೀಸರು ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳ ಮನವೊಲಿಕೆಗೆ ಮುಂದಾದರೂ ಸಹ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ, ನಿಗಮದ ವಿಭಾಗೀಯ ನಿಯಂತ್ರಣ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಬಸ್ ಗಳು ಸಕಾಲಕ್ಕೆ ಬರುವಂತೆ ನೋಡಿಕೊಳ್ಳಲಾಗುವುದು. ಅಷ್ಟೇ ಅಲ್ಲದೆ ಹೆಚ್ಚುವರಿ ಬಸ್ ಗಳನ್ನ ಸಂಚರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಿಲ್ಲಿಸಿ ಶಾಲಾ- ಕಾಲೇಜುಗಳಿಗೆ ತೆರಳಿದರು.