For the best experience, open
https://m.samyuktakarnataka.in
on your mobile browser.

ಬಿಜೆಪಿ ಅತೃಪ್ತರ ಸೆಳೆಯಲು ಕಾಂಗ್ರೆಸ್ ಕಾರ್ಯತಂತ್ರ

03:11 AM Jan 29, 2024 IST | Samyukta Karnataka
ಬಿಜೆಪಿ ಅತೃಪ್ತರ ಸೆಳೆಯಲು ಕಾಂಗ್ರೆಸ್ ಕಾರ್ಯತಂತ್ರ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಅತೃಪ್ತರನ್ನು ಸೆಳೆಯಲು ಕಾಂಗ್ರೆಸ್ ರಾಜಕೀಯ ಕಾರ್ಯತಂತ್ರ ರೂಪಿಸತೊಡಗಿದೆ.
ಬಿಜೆಪಿ ಟಿಕೆಟ್ ಸಿಗುವುದು ಅನುಮಾನ ಇರುವ ಪ್ರಮುಖ ಮುಖಂಡರನ್ನು ಸಂಪರ್ಕಿಸಿ ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನ ಸದ್ದುಗದ್ದಲವಿಲ್ಲದೇ ನಡೆದಿದೆ. ಟಿಕೆಟ್ ಸಿಗದವರು ಮಾತ್ರವಲ್ಲದೆ ಲೋಕಸಭೆ ಚುನಾವಣೆಯಲ್ಲಿ ಪ್ರಭಾವ ಬೀರುವಂತಹ, ಗೆಲುವಿಗೆ ನಿರ್ಣಾಯಕವಾದಂತಹ ಮತಗಳನ್ನು ಸೆಳೆಯಬಲ್ಲ ಸಾಮರ್ಥ್ಯ ಇರುವ ಮುಖಂಡರುಗಳನ್ನು ಸಹ ಪಕ್ಷಕ್ಕೆ ಕರೆತರುವ ಕುರಿತಂತೆ ಆಪರೇಷನ್ ಹಸ್ತ ನಡೆಸಲು ವೇದಿಕೆ ಸಿದ್ಧವಾಗಿದೆ.
ಬಿಜೆಪಿ ಜೆಡಿಎಸ್ ಲೋಕಸಭೆ ಚುನಾವಣೆ ಪೂರ್ವ ಮೈತ್ರಿಯಿಂದಾಗಿ ಎರಡೂ ಪಕ್ಷಗಳ ಮುಖಂಡರುಗಳ ನಡುವೆ ಏರ್ಪಟ್ಟಿರುವ ಗೊಂದಲಗಳ ಲಾಭ ಪಡೆದು ಮೈತ್ರಿ ವಿದ್ಯಮಾನಗಳಿಂದ ಅಸಮಾಧಾನಗೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನೂ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಪ್ರಯತ್ನ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಆಪ್ತರ ಮೂಲಕ ಬಿಜೆಪಿಯ ಹಲವಾರು ಮುಖಂಡರುಗಳನ್ನು ಸಂಪರ್ಕಿಸಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಲು ಆಫರ್ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸುಮಲತಾ ಅಂಬರೀಶ್‌ಗೆ ಗಾಳ
ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಲೋಕಸಭೆ ಸದಸ್ಯೆ ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ ಮುಖಂಡರು ಗಾಳ ಹಾಕಿದ್ದಾರೆ ಎನ್ನಲಾಗಿದೆ. ಮೈತ್ರಿಯ ಹಿನ್ನೆಲೆ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಕ್ಷೇತ್ರ ಕಳೆದುಕೊಳ್ಳುವ ಸುಮಲತಾ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡು ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಲು ಯೋಚಿಸಿದ್ದಾರೆ ಎನ್ನಲಾಗಿದೆ. ಆದರೆ, ಅವರು ಕಾಂಗ್ರೆಸ್ ಸೇರುವ ಬಗ್ಗೆ ಇದುವರೆಗೆ ಯಾವುದೇ ಸುಳಿವನ್ನು ನೀಡಿಲ್ಲ. ಕಾಂಗ್ರೆಸ್ ಸೇರಲು ಒತ್ತಡವಿರುವುದನ್ನು ಸುಮಲತಾ ಖಚಿತಪಡಿಸಿದ್ದು, ಬಿಜೆಪಿ ಮತ್ತು ಜೆಡಿಎಸ್ ನಡುವೆ ಸೀಟು ಹಂಚಿಕೆಯನ್ನು ಅವರು ಎದುರು ನೋಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸಹ ತನ್ನ ತಂತ್ರಗಾರಿಕೆ ಪ್ರಯೋಗ ಮಾಡಲು ಎರಡೂ ಪಕ್ಷಗಳ ನಡುವಿನ ಸೀಟು ಹಂಚಿಕೆಯನ್ನೂ ಕಾಯತೊಡಗಿದೆ.
ತುಮಕೂರಿನತ್ತಲೂ ಚಿತ್ತ
ತುಮಕೂರು ಕ್ಷೇತ್ರದಲ್ಲಿಯೂ ಬಿಜೆಪಿ ಮುಖಂಡ ಮಾಜಿ ಸಂಸದ ಮುದ್ದಹನುಮೇಗೌಡ ಅವರನ್ನು ಸೆಳೆಯುವ ಪ್ರಯತ್ನ ನಡೆಸಿದೆ. ಬಿಜೆಪಿಯ ಸಂಸದ ಜಿ.ಎಸ್. ಬಸವರಾಜ್ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರುವ ನಿರ್ಧಾರ ತೆಗೆದುಕೊಂಡಿದ್ದರಿಂದ ಮುದ್ದು ಹನುಮೇಗೌಡರು ಬಿಜೆಪಿ ಪಕ್ಷದ ಲೋಕಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಮಾಜಿ ಸಚಿವ ವಿ ಸೋಮಣ್ಣ ಸಹ ಟಿಕೆಟ್‌ಗೆ ತಮ್ಮ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಒಂದು ವೇಳೆ ಜಾತ್ಯತೀತ ಜನತಾದಳಕ್ಕೆ ಬಿಟ್ಟುಕೊಟ್ಟರೆ ಈ ಬೆಳವಣಿಗೆಯಿಂದ ಬೇಸರಗೊಳ್ಳುವ ಮಾಜಿ ಸಂಸದ ಮುದ್ದಹನುಮೇಗೌಡ ಮತ್ತು ಮಾಜಿ ಸಚಿವ ಸೋಮಣ್ಣ ಅವರನ್ನು ಪಕ್ಷಕ್ಕೆ ಸೆಳೆಯುವ ಬಗ್ಗೆ ಕಾಂಗ್ರೆಸ್ ಮುಖಂಡರು ಚಿಂತನೆ ನಡೆಸಿದ್ದಾರೆ.
ಹಾಗೆಯೇ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಮುಖಂಡ ಮಾಜಿ ಸಚಿವ ಕುಮಾರ ಬಂಗಾರಪ್ಪ, ಹಾಸನದಲ್ಲಿ ಮಾಜಿ ಶಾಸಕ ಎ.ಟಿ ರಾಮಸ್ವಾಮಿ, ಬೆಂಗಳೂರಿನಲ್ಲಿ ಕೇಂದ್ರದ ಮಾಜಿ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಸೆಳೆಯುವ ಪ್ರಯತ್ನದಲ್ಲಿ ಕಾಂಗ್ರೆಸ್ ಮುಖಂಡರು ಇದ್ದಾರೆ ಎಂದು ತಿಳಿದು ಬಂದಿದೆ.