ಬೆಂಗಳೂರು ಕಟ್ಟಡ ದುರಂತ: ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತಗೊಂಡು ಹಲವು ಕಾರ್ಮಿಕರು ಸಾವಿಗೀಡಾದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು,
ಇನ್ನು ಘಟನೆಯಲ್ಲಿ ಮಡಿದವರ ಕುಟುಂಬಕ್ಕೆ ಸಾಂತ್ವನ ಹೇಳಿದರು.ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಅಲ್ಲ ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿದು ಬಿದ್ದಿದೆ. ಘಟನೆಯಲ್ಲಿ 8 ಜನ ಸಾವನ್ನಪ್ಪಿ 8ಜನರನ್ನ ರಕ್ಷಿಸಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವಾಗಿ 5 ಲಕ್ಷ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ ಎರಡು ಲಕ್ಷ ನೀಡಲಾಗುತ್ತದೆ. ಬಿಬಿಎಂಪಿಯಿಂದ ಮೂರು ಲಕ್ಷ ಪರಿಹಾರ ಘೋಷಿಸಿದೆ ಎಂದು ತಿಳಿಸಿದರು. ಗಾಯಾಳುಗಳಿಗೆ ಸರ್ಕರದಿಂದ ವೈದ್ಯಕೀಯ ವೆಚ್ಚ ಭರಿಸುತ್ತೇವೆ ಚಿಕಿತ್ಸೆ ಬಳಿಕ ಗಾಯಳುಗಳಿಗೂ ಪರಿಹಾರ ವಿತರಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದರು. ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರೊಬ್ಬರನ್ನು ಅಮಾನತು ಮಾಡಿದರೆ ಸಾಲದು. ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಕೊಟ್ಟ ಐಎಎಸ್ ಅಧಿಕಾರಿ ವಲಯ ಆಯುಕ್ತ, ಕಾರ್ಯಪಾಲಕ ಎಂಜಿನಿಯರ್ ಅವರಿಗೂ ನೋಟಿಸ್ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.ನಿಯಮಬಾಹಿರವಾಗಿ, ಸೂಕ್ತ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು. ಅನಧಿಕೃತ ಕಟ್ಟಡ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ಕೆಲಸ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್ ಅವರಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು