For the best experience, open
https://m.samyuktakarnataka.in
on your mobile browser.

ಬೆಳಗಾವಿ ಅಧಿವೇಶನ: ಪ್ರತಿಭಟನೆಗಳ ಇಳಿಮುಖಕ್ಕೆ ಸಭಾಪತಿ ಸಲಹೆ

11:27 AM Nov 21, 2023 IST | Samyukta Karnataka
ಬೆಳಗಾವಿ ಅಧಿವೇಶನ  ಪ್ರತಿಭಟನೆಗಳ ಇಳಿಮುಖಕ್ಕೆ ಸಭಾಪತಿ ಸಲಹೆ

ಬೆಂಗಳೂರು : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023 ರಿಂದ ಡಿಸೆಂಬರ್ 15ರ ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನವನ್ನು ರಾಜ್ಯ ಸರ್ಕಾರ ನಡೆಸಲು ನಿರ್ಧರಿಸಿರುವ ಹಿನ್ನೆಲೆ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದು, ಅಧಿವೇಶನದ ಅತ್ಯಮೂಲ್ಯವಾದ ಸಮಯು ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸಲಹೆ ನೀಡಿದ್ದಾರೆ.
ಪತ್ರದಲ್ಲಿ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್.ಹೊರಟ್ಟಿ ಅವರು ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದ್ದು, ಈ ಹಿನ್ನಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸುವ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಂಬಂಧಪಟ್ಟ ಸಚಿವರಿಗೆ ಸೂಚಿಸಬೇಕು ಹಾಗೂ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೋರಿದ್ದಾರೆ.
ಬೆಳಗಾವಿಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು, ಸಾರ್ಥಕವಾಗಿ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಪತ್ರದ ಮೂಲಕ ಕೋರಿದ್ದಾರೆ ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್ ಹೊರಟ್ಟಿ ಅವರು
ಪತ್ರದಲ್ಲಿ ಸಲಹೆ ನೀಡಿರುತ್ತಾರೆ ಎಂದು ಸಭಾಪತಿಯವರ ಕಚೇರಿ ಪ್ರಕಟಣೆ ತಿಳಿಸಿದೆ.