For the best experience, open
https://m.samyuktakarnataka.in
on your mobile browser.

ಬೆಳಗಾವಿ ಅಧಿವೇಶನ: ಸೂಕ್ತ ಬಂದೋಬಸ್ತ್‌ಗೆ ಕಟ್ಟುನಿಟ್ಟಿನ ಸೂಚನೆ

09:48 PM Dec 04, 2024 IST | Samyukta Karnataka
ಬೆಳಗಾವಿ ಅಧಿವೇಶನ  ಸೂಕ್ತ ಬಂದೋಬಸ್ತ್‌ಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಯಾವುದೇ ರೀತಿಯ ಸಣ್ಣ ಅಹಿಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದರು.
ಅಧಿವೇಶನದ ವೇಳೆ ಇಲಾಖೆಯ ಮೇಲೆ ಆರೋಪಗಳು ಬರುತ್ತಿದ್ದು ಗ್ಯಾಲರಿ ಪಾಸ್, ಸುವರ್ಣಸೌಧಕ್ಕೆ ಭೇಟಿ ನೀಡುವವರ ಮೇಲೆ ನಿಗಾವಹಿಸಬೇಕು. ಯಾವುದೇ ಲೋಪಗಳಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಎಲ್ಲ ಅಧಿಕಾರಿಗಳು ಹಾಜರಿರಬೇಕು ಎಂದು ಗೃಹ ಸಚಿವರು ತಾಕೀತು ಮಾಡಿದರು.
ಕಳೆದ ವರ್ಷ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಮಹಿಳೆಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ಇಂತಹ ಸಂದರ್ಭಗಳಿಗಾಗಿ ಕಾಯುತ್ತಿರುವ ವಿಪಕ್ಷದವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಾರೆ. ಅಂತಹ ಘಟನೆಗಳಿಗೆ ಅವಕಾಶ ಮಾಡಿಕೊಡುವುದು ಬೇಡ ಎಂದು ಅಧಿಕಾರಿಗಳಿಗೆ ಸಚಿವರು ಕಿವಿಮಾತು ಹೇಳಿದರು.