ಮಕ್ಕಳ ಹಕ್ಕುಗಳ ಗ್ರಾಮ ಸಭೆ
ಬೆಂಗಳೂರು : ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಮುಕ್ತವಾಗಿ ಚರ್ಚಿಸುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪ್ರತಿ ವರ್ಷ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ "ಮಕ್ಕಳ ಹಕ್ಕುಗಳ ಗ್ರಾಮ ಸಭೆ"ಯನ್ನು ಆಯೋಜಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಮಕ್ಕಳ ಗ್ರಾಮ ಸಭೆಯ ಮೂಲ ಉದ್ದೇಶ ಮಕ್ಕಳು ಪಂಚಾಯತಿ ವ್ಯವಸ್ಥೆಯ ಬಗ್ಗೆ, ಗ್ರಾಮಗಳ ಅಭಿವೃದ್ಧಿಯ ಬಗ್ಗೆ ಜ್ಞಾನವನ್ನು ವೃದ್ಧಿಸಿಕೊಳ್ಳುವುದಾಗಿದೆ. ಈ ಮೂಲಕ ಮಕ್ಕಳಿಗೆ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಿದಾಗ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮಲಿದ್ದಾರೆ.
ಪ್ರತಿ ವರ್ಷ ಮಕ್ಕಳಿಗಾಗಿ ಆಯೋಜಿಸುವ ಗ್ರಾಮ ಸಭೆಯಲ್ಲಿ ಮಕ್ಕಳು ತಮಗೆ ಅಗತ್ಯವಿರುವ ಮೂಲ ಸೌಕರ್ಯಗಳ ಕುರಿತು, ಆರೋಗ್ಯ, ಶೌಚಾಲಯ, ಶಿಕ್ಷಣ, ರಸ್ತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಹಾಜರಿರುವ ಜನಪ್ರತಿನಿಧಿಗಳೊಂದಿಗೆ, ಅಧಿಕಾರಿಗಳೊಂದಿಗೆ ಚರ್ಚಿಸಲು ಮುಕ್ತ ಅವಕಾಶವಿರುತ್ತದೆ.
ಈ ನಿಟ್ಟಿನಲ್ಲಿ ಈ ವರ್ಷದ ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ಸಲುವಾಗಿ ಪ್ರತಿ ಗ್ರಾಮ ಪಂಚಾಯತಿಯ 9 ಮತ್ತು 10ನೇ ತರಗತಿಯ 25 ವಿದ್ಯಾರ್ಥಿಗಳು ಒಬ್ಬ ಶಿಕ್ಷಕರೊಂದಿಗೆ ಪ್ರವಾಸ ಕೈಗೊಂಡು ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗುವುದು ಮತ್ತು "ಮಕ್ಕಳ ಪಂಚಾಯತ್" ಅರಿವಿನ ಹಬ್ಬವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.
ಮಕ್ಕಳಿಗಾಗಿ ಇಂತಹ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವುದು ಕಾರ್ಯರೂಪಕ್ಕೆ ತರುವುದಕ್ಕೆ ನಮ್ಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸದಾ ಬದ್ದವಾಗಿದೆ ಎಂದಿದ್ದಾರೆ.