ಮಸೀದಿ ಬಳಿ ಜೈ ಶ್ರೀರಾಮ್ ಕೂಗಿದರೆ ತಪ್ಪಲ್ಲ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿ ಮಸೀದಿ ಮುಂದೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಇಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಈ ಸಂಬಂಧ ಪುತ್ತೂರಿನ ಬಿಳಿನೆಲೆಯ ಕೀರ್ತನ್ ಕುಮಾರ್(೨೮) ಮತ್ತು ಎನ್.ಎಂ.ಸಚಿನ್ ಕುಮಾರ್(೨೬) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ. ಈ ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹಾಗಾಗಿ, ಅರ್ಜಿದಾರರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ’ ಎಂದಿದೆ.
ಪ್ರಕರಣವೇನು?: ‘ಕಡಬದ ಐತ್ತೂರು ಗ್ರಾಮದ ಮರ್ಧಾಳದ ಬದ್ರಿಯಾ ಜುಮ್ಮಾ ಮಸೀದಿ ಮುಂದೆ ಸೆ. ೨೪ರಂದು ರಾತ್ರಿ ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದಿದ್ದಾರೆ’ ಎಂದು ಆರೋಪಿಸಿ ಮಸೀದಿ ಸಿಬ್ಬಂದಿ ಕೀರ್ತನ್ ಕುಮಾರ್ ಮತ್ತು ಎನ್.ಎಂ.ಸಚಿನ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದರು.