ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ
ಬಳ್ಳಾರಿ: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ೧೮೭ ಕೋಟಿ ರೂ ಹಗರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಅವರ ನಿವಾಸದಲ್ಲಿಯೇ ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿನ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಬಿ.ನಾಗೇಂದ್ರ ಎಸ್ಐಟಿ ಕಚೇರಿಗೆ ವಿಚಾರಣೆಗಿದ್ದ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರ ಅವರ ಬಳ್ಳಾರಿ ಮತ್ತು ಬೆಂಗಳೂರಿನ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ಬರೋಬ್ಬರಿ ಎರಡು ದಿನಗಳ ಕಾಲ ದಾಳಿ, ಶೋಧ ಕಾರ್ಯ ನಡೆದಿತ್ತು. ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಾಗೂ ಬೇನಾಮಿ ಆಸ್ತಿಯ ಮಹತ್ವದ ದಾಖಲೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರನ್ನು ಇಡಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕೇವಲ ನಾಗೇಂದ್ರ ಮಾತ್ರವಲ್ಲದೇ ಅವರ ಆಪ್ತರು, ಕೆಲ ಸಂಬಂಧಿಕರಿಗೂ ನೋಟಿಸ್ ನೀಡಲಾಗಿದ್ದು ಅವರು ಕೂಡ ವಿಚಾರಣೆಗೆ ಹಾಜರಾಗಲಿದ್ದಾರೆ. ಇದೇ ಹಗರಣದ ಆರೋಪ ಹೊತ್ತಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲರ ಮೇಲೂ ಇಡಿ ಅಧಿಕಾರಿಗಳು ನಿಗಾ ಇಟ್ಟಿದ್ದು ಯಾವುದೇ ಕ್ಷಣದಲ್ಲಿ ಅವರನ್ನೂ ವಶಕ್ಕೆ ಪಡೆಯಬಹುದು ಎನ್ನಲಾಗುತ್ತಿದೆ.