ಮಿಷನ್ ಮಾದರಿಯಲ್ಲಿ ಮನೆ ಮನೆಗೆ ಹೋಗಿ ಲಸಿಕೆ
ಬೆಂಗಳೂರು: ಆರೋಗ್ಯ ಇಲಾಖೆ ವತಿಯಿಂದ ಮಿಷನ್ ಮಾದರಿಯಲ್ಲಿ ಮನೆ ಮನೆಗೆ ಹೋಗಿ ಲಸಿಕೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು ಮಲೆನಾಡು ಜಿಲ್ಲೆಗಳಲ್ಲಿ ಮಾರಣಾಂತಿಕ ಮಂಗನ ಕಾಯಿಲೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದರೂ ಎಚ್ಚೆತ್ತುಕೊಳ್ಳದ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಈಗಾಗಲೇ ಇಬ್ಬರು ಸೊಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.
ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಮತ್ತು ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಮಂಗನಕಾಯಿಲೆ ಕಾಣಿಸಿಕೊಳ್ಳುವುದು ವಾಡಿಕೆ. ಕಳೆದ 66 ವರ್ಷಗಳಿಂದ ಈ ರೋಗ ಕಾಡುತ್ತಿದ್ದು, ಇಷ್ಟೆಲ್ಲಾ ಮಾಹಿತಿ ಇದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದ ಆರೋಗ್ಯ ಸಚಿವ ದಿನೇಶ ಗುಂಡುರಾವ ಅವರೇ ಈ ಸಾವುಗಳಿಗೆ ನೇರ ಹೊಣೆ.
ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಈ ಕೂಡಲೇ ಆರೋಗ್ಯ ಇಲಾಖೆ ವತಿಯಿಂದ ಮಿಷನ್ ಮಾದರಿಯಲ್ಲಿ ಮನೆ ಮನೆಗೆ ಹೋಗಿ ಲಸಿಕೆ ನೀಡಬೇಕು. ಸಂಶೋಧನಾ ಸಂಸ್ಥೆಗಳು ಮತ್ತು ಉತ್ಪಾದನಾ ಕಂಪನಿಗಳ ಜತೆ ಸಮಾಲೋಚನೆ ನಡೆಸಿ ರೋಗಕ್ಕೆ ಕಾರಣವಾಗಿರುವ ವೈರಸ್ ನಲ್ಲಿ ಆಗಿರುವ ಬದಲಾವಣೆಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಲಸಿಕೆ ಕಂಡು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು.
ಬೆಂಗಳೂರು ಅಥವಾ ಶಿವಮೊಗ್ಗ ನಗರದಲ್ಲಿ ಕುಳಿತು ಸಭೆಗಳನ್ನು ನಡೆಸಿದರೆ ಪ್ರಯೋಜನ ಆಗುವುದಿಲ್ಲ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ಫೀಲ್ಡಿಗಿಳಿದು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಲೆನಾಡು ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಿ ರೋಗ ಲಕ್ಷಣ ಕಾಣಿಸುತ್ತಿದ್ದಂತೆ ಸೋಂಕಿತರನ್ನು ತಾಲ್ಲೂಕು ಅಥವಾ ಜಿಲ್ಲೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಬೇಕು.
ರಾಜ್ಯ ಸರ್ಕಾರ ಈ ಸಾವಿನ ನೈತಿಕ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು. ಆ ಕುಟುಂಬದ ಒಬ್ಬ ವ್ಯಕ್ತಿಗೆ ಸರಕಾರದ ಉದ್ಯೋಗ ನೀಡಬೇಕು ಮತ್ತು ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.