ಮುಡಾ ಪ್ರಕರಣ: ಜ.27ಕ್ಕೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ..?
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೇಳಿ ಬಂದಿರುವ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ಅಂತಿಮ ಹಂತದ ವಿಚಾರಣೆ ಜ.27ಕ್ಕೆ ಧಾರವಾಡ ಹೈಕೋರ್ಟ್ ಪೀಠ ಮುಂದೂಡಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ತನಿಖೆಯನ್ನು ಸಿಬಿಐಗೆ ವಹಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿದ್ದ ಪೀಠ ಎದುರುದಾರರಿಗೆ ತಕರಾರು ಅರ್ಜಿ ಸಲ್ಲಿಸುವಂತೆ ಸೂಚಿಸಿ ಜ.27 ಕ್ಕೆ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿ ಮುಂದೂಡಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಪರ ವಕೀಲರಾದ ವಸಂತಕುಮಾರ, ಬೆಂಗಳೂರಿನಲ್ಲಿ ಎರಡ್ಮೂರು ಬಾರಿ ವಿಚಾರಣೆ ನಡೆದಿತ್ತು. ಮುಡಾ ಸಂಬಂಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಈ ಹಗರಣದ ಪ್ರಾಮಾಣಿಕ ತನಿಖೆಯಾಗಬೇಕಾದರೆ ಇದನ್ನು ಸಿಬಿಐಗೆ ವಹಿಸಬೇಕು ಎಂದು ಅರ್ಜಿ ಸಲ್ಲಿಸಿದ್ದೆವು. ನಾವು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೆವು. ಲೋಕಾಯುಕ್ತ ಸಂಸ್ಥೆ ರಾಜ್ಯ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತದೆ ಎಂದು ನಾವು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಮುಡಾ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಕೇಳಿಕೊಂಡಿದ್ದೇವೆ ಎಂದರು.
ಸ್ನೇಹಮಯಿ ಕೃಷ್ಣ ಅವರ ಪರ ವಕೀಲರಾದ ಮಣಿಂದರ್ ಸಿಂಗ್ ಸುದೀರ್ಘವಾದ ವಾದ ಮಂಡಿಸಿದ್ದಾರೆ. ಉಳಿದ ಪಿಟಿಷನರ್‌ಗಳ ಆಕ್ಷೇಪಣೆಗಳ ಕಾಪಿಗಳನ್ನು ನಾವು ಇಂದು ಬೆಳಿಗ್ಗೆ ಪಡೆದಿದ್ದೇವೆ. ಇಡಿಯನ್ನೂ ಇದರಲ್ಲಿ ಸೇರ್ಪಡೆ ಮಾಡಿಕೊಳ್ಳಲು ಮನವಿ ಮಾಡಲಾಗಿದೆ. ಇದನ್ನೆಲ್ಲ ಆಲಿಸಿ ಜ.27 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ ಎಂದರು.