ಮುಡಾ ಹಗರಣ: ಸಿಎಂ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮ ಅರ್ಜಿಯ ವಿಚಾರಣೆಯು ಗುರುವಾರ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ನಡೆಯಿತು. ಅಲ್ಲದೇ, ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕ್ರಿಯೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಮುಂದಿನ ವಿಚಾರಣೆವರೆಗೂ ವಿಸ್ತರಿಸಿ ಆದೇಶಿಸಿತು. ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಇಂದು ಮುಖ್ಯಮಂತ್ರಿಗಳ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದರು. ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಇಂದು ಸಹ ಸುಧೀರ್ಘ ವಾದ, ಪ್ರತಿವಾದ ನಡೆಯಿತು. ಸುಧೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರು ತೀರ್ಪು ಕಾಯ್ದಿರಿಸಿದ್ದಾರೆ.