ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ಅಬ್ಬಯ್ಯ ಒತ್ತಾಯ
ಬೆಳಗಾವಿ(ವಿಧಾನಸಭೆ): ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಜೊತೆ ಜೊತೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಮೈಸೂರು ಹುಲಿ ಟಿಪ್ಪು ಸುಲ್ತಾನ ಅವರ ಹೆಸರಿಡಬೇಕೆಂದು ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಸದನದಲ್ಲಿ ಗುರುವಾರ ಗಮನ ಸೆಳೆದರು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಮತ್ತು ವಿಜಯಪುರಕ್ಕೆ ಜಗಜ್ಯೋತಿ ಬಸವೇಶ್ವರ ಅವರ ಹೆಸರನ್ನು ಇಡುವಂತೆ ಸದನವು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವ ವೇಳೆ ಸದನದ ಗಮನ ಸೆಳೆದ ಶಾಸಕ ಪ್ರಸಾದ ಅಬ್ಬಯ್ಯ ಈ ನಾಲ್ಕು ವಿಮಾನ ನಿಲ್ದಾಣಗಳಿಗೆ ಇಟ್ಟ ಹೆಸರನ್ನು ಹೃದಯಪೂರ್ವಕವಾಗಿ ಒಪ್ಪಿಕೊಳ್ಳುತ್ತೇವೆ. ಇವುಗಳ ಜೊತೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಅವರ ಹೆಸರಿಡುವಂತೆ ಒತ್ತಾಯಿಸಿ ಸದನದ ಗಮನ ಸೆಳೆದರು. ಈ ವೇಳೆ ಪ್ರತಿಪಕ್ಷದ ಶಾಸಕರು ದೊಡ್ಡ ಧ್ವನಿಯಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಅತ್ತ ಕಾಂಗ್ರೆಸ್ ಶಾಸಕರು ಸಹ ಟಿಪ್ಪು ಹೆಸರಿಡುವಂತೆ ಒತ್ತಾಯಿಸಿದ ಪ್ರಸಂಗ ನಡೆಯಿತು.