For the best experience, open
https://m.samyuktakarnataka.in
on your mobile browser.

ರಾಜ್ಯಕ್ಕೆ ೨೩,೦೦೦ ಕೋಟಿ ರೂ. ಬಂಡವಾಳ ಹೂಡಿಕೆ ವಿಶ್ವಾಸ

12:12 AM Jan 25, 2024 IST | Samyukta Karnataka
ರಾಜ್ಯಕ್ಕೆ ೨೩ ೦೦೦ ಕೋಟಿ ರೂ  ಬಂಡವಾಳ ಹೂಡಿಕೆ ವಿಶ್ವಾಸ

ಬೆಂಗಳೂರು: ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ ವಿವಿಧ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಮಹತ್ವದ ಒಪ್ಪಂದಗಳ ಫಲವಾಗಿ ರಾಜ್ಯಕ್ಕೆ ೨೩,೦೦೦ ಕೋಟಿ ರೂ.ಗೂ ಅಧಿಕ ಮೊತ್ತದ ಬಂಡವಾಳ ಹರಿದುಬರಲಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಾವೋಸ್ ಪ್ರವಾಸದ ಫಲಶ್ರುತಿ ತಿಳಿಸುವ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಸ್ಲೆ, ಎಚ್‌ಪಿ, ಎಚ್‌ಸಿಎಲ್, ಐಕಿಯಾ, ಸೋನಿ, ಮೈಕ್ರೋಸಾಫ್ಟ್, ವೋಲ್ವೊ ಗ್ರೂಪ್, ಹಿಟಾಚಿ ಮತ್ತಿತರ ಜಾಗತಿಕ ಉದ್ಯಮಗಳ ಪ್ರಮುಖರ ಜೊತೆಗೆ ರಾಜ್ಯದ ನಿಯೋಗವು ೫೦ಕ್ಕೂ ಹೆಚ್ಚಿನ ಸಭೆಗಳನ್ನು ನಡೆಸಿತು.
ಬೆಂಗಳೂರಿನಲ್ಲಿ ೧೦೦ ಮೆಗಾವ್ಯಾಟ್ ಸಾಮರ್ಥ್ಯದ ಬೃಹತ್ ಗಾತ್ರದ ಡೇಟಾ ಸೆಂಟರ್ ಸ್ಥಾಪಿಸಲು ವೆಬ್‌ವರ್ಕ್ಸ್ ಕಂಪನಿ ೨೦,೦೦೦ ಕೋಟಿ ರೂ. ಹೂಡಿಕೆ ಮಾಡಲಿದೆ.
ಇದರಿಂದ ೧,೦೦೦ ಉದ್ಯೋಗ ದೊರೆಯಲಿವೆ. ಡಿಜಿಟಲ್ ಕೌಶಲಾವೃದ್ಧಿಗೆ ಮೈಕ್ರೊಸಾಫ್ಟ್ ವಾಗ್ದಾನ ಮಾಡಿದೆ ಎಂದು ಮಾಹಿತಿ ನೀಡಿದರು.
ಉತ್ತರ ಕರ್ನಾಟಕಕ್ಕೆ ಆದ್ಯತೆ
ಲುಲು ಗ್ರೂಪ್, ಬಿಎಲ್ ಅಗ್ರೊ ವಿಜಯಪುರದಲ್ಲಿ ತಮ್ಮ ನೆಲೆ ವಿಸ್ತರಿಸಲಿವೆ. ವಿಜಯಪುರದಲ್ಲಿ ೩೦೦ ಕೋಟಿ ರೂ. ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪನೆ ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸುವ ಉದ್ದೇಶಕ್ಕೆ ಬಂಡವಾಳ ಹೂಡಿಕೆ ಮಾಡಲು ಲುಲು ಸಮೂಹವು ಯೋಜಿಸಿದೆ ಎಂದು ಸಚಿವರು ತಿಳಿಸಿದರು.
ಮದ್ಯ ತಯಾರಿಕೆ ಘಟಕ ಸ್ಥಾಪನೆ
ಎಬಿ ಇನ್‌ಬೇವ್ ಇಂಡಿಯಾ ಕಂಪನಿಯು ಕರ್ನಾಟಕದಲ್ಲಿ ತನ್ನ ಮದ್ಯ ತಯಾರಿಕಾ ಘಟಕಗಳ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ೪೦೦ ಕೋಟಿ ಮೊತ್ತದ ಬಂಡವಾಳ ತೊಡಗಿಸುವ ಇಂಗಿತ ವ್ಯಕ್ತಪಡಿಸಿದೆ ಎಂದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ ಎಸ್ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್‌ಕೌರ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಿಇಒ ಡಾ. ಮಹೇಶ್ ಮತ್ತಿತರ ಉನ್ನತ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿದ್ದರು.