ರಾಜ್ಯದ ಏಳನೇ ವೇತನ ಆಯೋಗ ವರದಿ ಸಲ್ಲಿಕೆ
ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5ರಷ್ಟು ಹೆಚ್ಚಳಕ್ಕೆ ಶಿಫಾರಸು
ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 27ರಷ್ಟು ಹೆಚ್ಚಿಸಲು ಶಿಫಾರಸು ಮಾಡಲಾಗಿದ್ದು. ಇದರ ಜತೆಗೆ ಮೂಲ ವೇತನವನ್ನು 27,000 ರೂ.ಗಳಿಗೆ ಹೆಚ್ಚಿಸುವಂತೆಯೂ ಶಿಫಾರಸು ಮಾಡಲಾಗಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದು, ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ರೂ.17,000 ದಿಂದ ರೂ.27,000 ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.