ಲೋಕಸಭೆ ಚುನಾವಣೆ ನಂತರ ಸರ್ಕಾರ ಪತನ
ಕುಷ್ಟಗಿ: ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಮತದಾರರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಹೋಗಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.
ಲಿಂಗಸೂಗೂರನಲ್ಲಿ ನಡೆಯುತ್ತಿರುವ ದಸರಾ ದರ್ಬಾರ್ ಕಾರ್ಯಕ್ರಮಕ್ಕೆ ಕುಷ್ಟಗಿ ಮಾರ್ಗವಾಗಿ ತೆರಳುತ್ತಿರುವ ಸಂದರ್ಭದಲ್ಲಿ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ ಅವರ ನೇತೃತ್ವದಲ್ಲಿ ಸನ್ಮಾನಿಸಿದ ಬಳಿಕ ಸುದ್ದಿಗಾರೊಂದಿಗೆ ಅವರು ಮಾತನಾಡಿದರು.
ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಮತದಾರರಿಗೆ ಮಂಕುಬೂದಿ ಎರಚಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು. ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯನವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ದೂರಿದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ರಾಜ್ಯದ ಮತದಾರರು ನಿರ್ಣಯಿಸಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರ ಕೇವಲ ಗ್ಯಾರಂಟಿಗಳ ಮೇಲೆ ಆಡಳಿತ ನಡೆಸುತ್ತಿದ್ದು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸಿದ್ದರಾಮಯ್ಯನವರ ಸರ್ಕಾರ ಪತನಗೊಳ್ಳುವ ಮೂಲಕ ಛದ್ರವಾಗಲಿದೆ ಎಂದು ತಿಳಿಸಿದರು.