ವಾರದೊಳಗೆ ಜೆಡಿಎಸ್ ಪಟ್ಟಿ
ಬೆಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಾರದೊಳಗೆ ಅಂತಿಮಗೊಳ್ಳಲಿದೆ. ಕ್ಷೇತ್ರ ಹಂಚಿಕೆಯಾದ ಬೆನ್ನಲ್ಲೇ ಪಕ್ಷದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರಂತರವಾಗಿ ಲೋಕಸಭಾ ಕ್ಷೇತ್ರವಾರು ಸಭೆ ನಡೆಸಿ ಚುನಾವಣೆ ಸಿದ್ಧತೆ ಬಗ್ಗೆ ಪಕ್ಷದ ಮುಖಂಡರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅಲ್ಲದೆ, ಆಯಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.
ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಮೈತ್ರಿ ಧರ್ಮದ ವಿಚಾರದಲ್ಲಿ ಲೋಪವಾಗಬಾರದು ಎಂಬ ಸಲಹೆಯನ್ನು ಕುಮಾರಸ್ವಾಮಿ ನೀಡಿದ್ದಾರೆ. ಜೆಡಿಎಸ್‌ಗೆ ಮೂರರಿಂದ ನಾಲ್ಕು ಕ್ಷೇತ್ರಗಳು ದೊರೆಯುವ ಸಾಧ್ಯತೆ ಇದ್ದು, ಆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆದಿದ್ದಾರೆ. ಬಿಜೆಪಿ ಕೇಂದ್ರ ನಾಯಕರ ಆಹ್ವಾನದ ಮೇರೆಗೆ ಸದ್ಯದಲ್ಲೇ ದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ನಾಯಕರೊಂದಿಗೆ ಕುಮಾರಸ್ವಾಮಿ ಅವರು, ಕ್ಷೇತ್ರ ಹಂಚಿಕೆ ಹಾಗೂ ಅಭ್ಯರ್ಥಿ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಸಿ ಅಂತಿಮಗೊಳಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆದ ಬಳಿಕ ಕುಮಾರಸ್ವಾಮಿ ಅವರಿಗೆ ದೆಹಲಿಗೆ ಬರುವಂತೆ ಆಹ್ವಾನ ನೀಡಲಾಗುತ್ತದೆ. ಬಿಜೆಪಿ ನಾಯಕರೊಂದಿಗೆ ಚುನಾವಣಾ ಸಿದ್ಧತೆ ಮತ್ತು ಕಾರ್ಯತಂತ್ರದ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಾರದೊಳಗೆ ಮಿತ್ರ ಪಕ್ಷಗಳ ನಡುವೆ ಸೀಟು ಹಂಚಿಕೆಯಾಗಲಿದೆ ಎಂದು ಮೂಲಗಳು ಹೇಳಿವೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಘೋಷಿಸಿದ್ದಾರೆ. ಮಂಡ್ಯ ಇಲ್ಲವೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಕುಮಾರಸ್ವಾಮಿ ಅವರಿಗೆ ಪಕ್ಷದ ಮುಖಂಡರ, ಕಾರ್ಯಕರ್ತರ ಒತ್ತಡವಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಸಲಹೆಯಂತೆ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಸದ್ಯಕ್ಕೆ ಮಂಡ್ಯ ಕ್ಷೇತ್ರದಲ್ಲಿ ಮಾಜಿ ಸಂಸದ ಸಿ.ಎಸ್.ಪುಟ್ಟರಾಜು ಅವರ ಹೆಸರು ಮುಂಚೂಣಿಯಲ್ಲಿದೆ. ಕುಮಾರಸ್ವಾಮಿ ಅವರು ಈ ಕ್ಷೇತ್ರದಿಂದ ಸ್ಪರ್ಧೆ ಮಾಡದಿದ್ದರೆ, ಪುಟ್ಟರಾಜು ಅವರೇ ಅಭ್ಯರ್ಥಿಯಾಗುವುದು ಖಚಿತ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಕೋಲಾರ ಮೀಸಲು ಕ್ಷೇತ್ರದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿದೆ. ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಮತ್ತೊಂದು ಕ್ಷೇತ್ರ ದೊರೆಯುವ ನಿರೀಕ್ಷೆಯಲ್ಲಿ ಜೆಡಿಎಸ್ ಇದೆ. ಕ್ಷೇತ್ರ ಹಂಚಿಕೆಯಾದ ಬೆನ್ನಲ್ಲೇ ಅಭ್ಯರ್ಥಿ ಆಯ್ಕೆ ಮಾಡಲಿದ್ದು, ಈಗಾಗಲೇ ಚುನಾವಣೆ ತಯಾರಿ ಆರಂಭಿಸಲಾಗಿದೆ ಎಂದು ಮೂಲಗಳು ಹೇಳಿವೆ.