ವಿಶ್ವಗುರು ಭಾರತ ನಿರ್ಮಾಣದ ನಿಟ್ಟಿನಲ್ಲಿ ಎನ್.ಡಿ.ಎ ಸರ್ಕಾರ
ಬೆಂಗಳೂರು: ವಿಶ್ವಗುರು ಭಾರತ ನಿರ್ಮಾಣದ ನಿಟ್ಟಿನಲ್ಲಿ ಎನ್.ಡಿ.ಎ ಸರ್ಕಾರದ ಬದ್ಧತೆಯನ್ನು ಈ ಬಜೆಟ್ ಪುನರುಚ್ಚರಿಸಿದ್ದು, ದೇಶದ ಪ್ರಗತಿಗೆ ಪೂರಕ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿರವರ ನವಭಾರತದ ಪರಿಕಲ್ಪನೆಯ ಸಾಕಾರದ ನಿಟ್ಟಿನಲ್ಲಿ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ, ರಾಷ್ಟ್ರದ 'ಪ್ರಗತಿನಿಷ್ಠ ಬಜೆಟ್' ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಚುನಾವಣಾಪೂರ್ವ ಜನಪ್ರಿಯ ಘೋಷಣೆಗಳ ಬಜೆಟ್ ಮಂಡಿಸದೆ, ಈ ಮಧ್ಯಂತರ ಬಜೆಟ್ ಮೂಲಕ ನಮ್ಮ ಯುವಜನತೆ, ರೈತರು, ಮಹಿಳೆಯರು ಹಾಗೂ ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗದ ಜನರ ಜೀವನಮಟ್ಟ ಸುಧಾರಿಸುವ, ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ ವಾಸ್ತವಿಕ ಆಯವ್ಯಯವನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸದೃಢ, ಸಶಕ್ತ, ವಿಕಸಿತ, ವಿಶ್ವಗುರು ಭಾರತ ನಿರ್ಮಾಣದ ನಿಟ್ಟಿನಲ್ಲಿ ಎನ್.ಡಿ.ಎ ಸರ್ಕಾರದ ಬದ್ಧತೆಯನ್ನು ಈ ಬಜೆಟ್ ಪುನರುಚ್ಚರಿಸಿದ್ದು, ದೇಶದ ಪ್ರಗತಿಗೆ ಪೂರಕವಾಗಿರುವ ಈ ಬಜೆಟ್ ಅನ್ನು ಸ್ವಾಗತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.