ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ
ಚಿಕ್ಕಮಗಳೂರು: ರಾಜ್ಯ ಸರ್ಕಾರಿ ನೌಕರರ ಮೂರು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಕುರಿತು ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಪ್ರಸ್ತಾಪವನ್ನು ಇಡೀ ಕಾರ್ಯಕಾರಿಣಿ ಸಭೆ ಒಕ್ಕೊರಲಿನಿಂದ ಅನುಮೋದಿಸಿತು.
ನಗರದ ಸೀತಾ ದಯಾನಂದ ಪೈ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ ಕೈಗೊಂಡಿದ್ದು,
ರಾಜ್ಯ ಸರ್ಕಾರಿ ನೌಕರರಿಗೆ ೭ನೇ ವೇತನ ಆಯೋಗದ ವರದಿಯ ಶಿಫಾರಸ್ಸನ್ನು ಜಾರಿಗೊಳಿಸುವುದು, ನೂತನ ಪಿಂಚಣಿ ಯೋಜನೆಯನ್ನು ಕೈ ಬಿಟ್ಟು ಹಳೇ ಯೋಜನೆಯನ್ನೇ ಮುಂದುವರೆಸುವುದು ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ, ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವ ನಿರ್ಣಯ ಕೈಗೊಂಡರು.
ಹೋರಾಟದ ಮೊದಲ ಹಂತವಾಗಿ ಜು.೮ ರಿಂದ ೧೪ ರವರೆಗೆ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಸುವುದು, ನಂತರ ಬೆಂಗಳೂರಿನಲ್ಲಿ ಮತ್ತೊಮ್ಮೆ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುವುದು, ಸ್ಪಂದಿಸದಿದ್ದಲ್ಲಿ ಈ ತಿಂಗಳ ಕೊನೆಯಲ್ಲಿ ಅಥವಾ ಆಗಸ್ಟ್ ತಿಂಗಳ ಆರಂಭದಿಂದಲೇ ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಕುರಿತು ಸಭೆ ತೀರ್ಮಾನಿಸಿತು.
ಸಭೆಯಲ್ಲಿ ಮಾತನಾಡಿದ ವಿವಿಧ ಇಲಾಖೆ ನೌಕರರ ಸಂಘಗಳ ಪ್ರಮುಖರು ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ಇಂದು ಅನಿವಾರ್ಯವಾಗಿದ್ದು ರಾಜ್ಯದ ಎಲ್ಲಾ ಆರು ಲಕ್ಷ ಸರ್ಕಾರಿ ನೌಕರರೂ ಒಗ್ಗೂಡಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.