For the best experience, open
https://m.samyuktakarnataka.in
on your mobile browser.

ಸಹಕಾರ ಬ್ಯಾಂಕ್‌ ಅಕ್ರಮ ತನಿಖೆ ಸಿಬಿಐಗೆ

07:36 PM Dec 02, 2023 IST | Samyukta Karnataka
ಸಹಕಾರ ಬ್ಯಾಂಕ್‌ ಅಕ್ರಮ ತನಿಖೆ ಸಿಬಿಐಗೆ

ಬೆಂಗಳೂರು: ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ ಜೀವನಕ್ಕೆ ಆಧಾರವಾಗಲೆಂದು, ಮಕ್ಕಳ ಮದುವೆ, ಸ್ವಂತ ಮನೆ ಖರೀದಿ ಮುಂತಾದ ಕನಸುಗಳನ್ನು ಇಟ್ಟುಕೊಂಡು ತಮ್ಮ ಜೀವಮಾನದ ಉಳಿತಾಯವನ್ನೆಲ್ಲ ಬ್ಯಾಂಕಿನಲ್ಲಿ ಹೂಡಿಕೆ ಮಾಡಿದ್ದರು. ಬ್ಯಾಂಕಿನವರ ವಂಚನೆಯಿಂದಾಗಿ ಅವರೆಲ್ಲರೂ ಮುಂದಿನ ತಮ್ಮ ಜೀವನದ ಬಗ್ಗೆ ದಿಕ್ಕು ತೋಚದಂತಾಗಿದ್ದಾರೆ.
ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಈ ಹಿಂದೆ ಪ್ರತಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿಯೂ ಸದನದ ಒಳಗೆ ಮತ್ತು ಹೊರಗೆ ಧ್ವನಿಯೆತ್ತಿದ್ದೆ, ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದೆ. ಆಗಲೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿತ್ತು. ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.