ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳ ಆಧಾರಿತ ಕಾರ್ಯಕ್ರಮಗಳಿಗೆ ಮಹತ್ವ
ಹುಬ್ಬಳ್ಳಿ : ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳನ್ನು ಆಧರಿಸಿದ ಕಾರ್ಯಕ್ರಮಗಳಿಗೆ ಮಹತ್ವ ನೀಡಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.
ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಶಾಲೆಗಳಲ್ಲಿ ಬಸವಣ್ಣನವರು, ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಸೇರಿದಂತೆ ರಾಷ್ಟ್ರದ ಮಹಾನ ನಾಯಕರ ಕುರಿತಾಗಿ ಭಾಷಣ ಸ್ಪರ್ಧೆಯನ್ನು ನಡೆಸಬೇಕು. ಅತ್ಯುತ್ತಮವಾಗಿ ಭಾಷಣ ಮಾಡುವ ಆರು ಜನ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ವೇದಿಕೆಯಲ್ಲಿ ಸನ್ಮಾನಿಸಲಾಗುವುದು. ಅಲ್ಲದೇ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ ವಿದ್ಯಾರ್ಥಿಗಳ ತಂಡದಿಂದ ಕಾರ್ಯಕ್ರಮ ಆಯೋಜನೆ ಮಾಡಬೇಕಾಗುತ್ತದೆ. ಅವರಿಗೂ ಸಹ ಉತ್ತಮ ವೇದಿಕೆಯನ್ನು ಕಲ್ಪಿಸಿದಂತಾಗುವುದು. ಮೂರು ಕಡೆಗಳಲ್ಲಿ ವೇದಿಕೆ ನಿರ್ಮಾಣ ಮಾಡಿ, ವಿವಿಧ ಕಾರ್ಯಕ್ರಮಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇತಿಹಾಸದ ಘಟನೆಗಳನ್ನು ಮೆಲುಕು ಹಾಕುವಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಜಾನಪದ ಶೈಲಿಯ ಕಾರ್ಯಕ್ರಮಗಳಿಗೂ ಅವಕಾಶ ಒದಗಿಸಬೇಕಾಗುತ್ತದೆ. ವಿಭಿನ್ನ ಹಾಗೂ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಒತ್ತು ನೀಡಬೇಕು. ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಗಣರಾಜ್ಯೋತ್ಸವಕ್ಕೆ ಮೆರುಗು ತರಬೇಕಾಗುತ್ತದೆ. ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಮಾತನಾಡಿ, ಗಣರಾಜ್ಯೋತ್ಸವವನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಬೇಕಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಸಂದೇಶ ರವಾನಿಸಬೇಕಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಡಿಸಿಪಿ ಮಹಾನಿಂಗ ನಂದಗಾವಿ,
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸ್ವಾಗತಿಸಿದರು. ಹುಬ್ಬಳ್ಳಿ ಶಹರ ತಹಶೀಲ್ದಾರ ಕಲಗೌಡ ಪಾಟೀಲ ವಂದಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧುಕಾರಿಗಳು ಭಾಗವಹಿಸಿದ್ದರು.