For the best experience, open
https://m.samyuktakarnataka.in
on your mobile browser.

ಸಿಎಂಗೆ ಮೋದಿ ಫೋಬಿಯಾ

01:33 PM Jan 18, 2024 IST | Samyukta Karnataka
ಸಿಎಂಗೆ ಮೋದಿ ಫೋಬಿಯಾ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮೋದಿ ಫೋಬಿಯಾ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರು ಅವರು ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೊದಿ ದಕ್ಷ ಆಡಳಿತ ನೀಡುತ್ತಿದ್ದಾರೆ. ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ‌. ಮತ್ತೆ ಮೂರನೆ ಬಾರಿಗೆ ಪ್ರಧಾನಿ ಆಗಲಿದ್ದಾರೆ. ಹೀಗಾಗಿ ಅದನ್ನು ಸಹಿಸಿಕೊಳ್ಳಲಾಗದೇ ಸಿದ್ದರಾಮಯ್ಯ ಅವರ ವಿರುದ್ದ ಅನಗತ್ಯ ಆರೋಪ ಮಾಡುತ್ತಾರೆ.
ಸಿಎಂ ಪುತ್ರ ಯತೀಂದ್ರ ಅವರೇ ಹೇಳಿರುವುದನ್ನು ಕೇಳಿದರೆ, ಕಾಂಗ್ರೆಸ್ ಹೆಚ್ಚು ಸೀಟು ಬಂದರೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ ಅಂತ ಹೇಳಿದ್ದಾರೆ. ಕಡಿಮೆ ಸೀಟು ಬಂದರೆ ಸಿಎಂ ಸ್ಥಾನ ಹೋಗುವ ಆತಂಕ ಅವರಿಗೆ ಕಾಡುತ್ತಿದೆ. ಅದಕ್ಕಾಗಿ ರಾಜ್ಯಕ್ಕೆ ಮೋದಿ ಬಂದಾಗೊಮ್ಮೆ ಸುಳ್ಳು ದಾಖಲೆಗಳನ್ನು ನೀಡಿ ಜನರ ದಾರಿ ತಪ್ಪಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
15 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಅನುದಾನ ಶೇ 4.7 ನಿಂದ ಶೇ 3.6 ಗೆ ಇಳಿಯಲು ಸಿದ್ದರಾಮಯ್ಯ ಅವರೇ ಕಾರಣ ಅವರು ಸರಿಯಾಗಿ ರಾಜ್ಯದ ವಸ್ತು ಸ್ಥಿತಿ ಬಗ್ಗೆ ಮಾಹಿತಿ ನೀಡಿಲ್ಲ. ನಮ್ಮ ಅವಧಿಯಲ್ಲಿಯೂ ಪ್ರವಾಹ ಬಂದಾಗ ಹಿಂದಿನ ಯುಪಿಎ ಸರ್ಕಾರ ಪರಿಹಾರ ನೀಡಿತ್ತಾ ? ನಾವು ಕೇಂದ್ರದ ಅನುದಾನಕ್ಕಾಗಿ ಕಾಯದೇ 2500 ಕೋಟಿ ರೂ. ಪರಿಹಾರ ನೀಡಿದ್ದೇವು. ಕರ್ನಾಟಕದ ಜನರು ನಿಮಗೆ ಮತ ಹಾಕಿದ್ದು, ಒಳ್ಳೆಯ ಆಡಳಿತ ನೀಡಲಿ ಎಂದು ಆದರೆ, ನೀವು ಅವೈಜ್ಞಾನಿಕ ಗ್ಯಾರೆಂಟಿ ಜಾರಿ ಮಾಡಿ ಆರ್ಥಿಕತೆ ಹಳಿ ತಪ್ಪಿಸುತ್ತಿದ್ದೀರಿ. ಗ್ಯಾರೆಂಟಿ ಯೋಜನೆಗಳ ಜಾರಿಗೆ 30 ಸಾವಿರ ಕೋಟಿ ಖರ್ಚು ಮಾಡಲು ಹೊರಟಿದ್ದೀರಿ, ಆದರೆ, ಅದಕ್ಕೆ ಹಣ ಮೀಸಲಿಟ್ಟಿಲ್ಲ. ಅಭಿವೃದ್ಧಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ. ಅದನ್ನು ಅವರ ಶಾಸಕರೇ ಹೇಳುತ್ತಿದ್ದಾರೆ. ಅವರ ಶಾಸಕರನ್ನು ಸಮಾಧಾನ ಮಾಡಲು ಪ್ರತಿಯೊಬ್ಬರಿಗೂ 25 ಕೋಟಿ ರೂ. ಕೊಡುವುದಾಗಿ ಹೇಳಿದ್ದಾರೆ. ನಾನು ಸಿಎಂ ಆಗಿದ್ದಾಗ ಕಾಂಗ್ರೆಸ್ ಶಾಸಕರಿಗೂ 25 ಕೋಟಿ ಕೊಟ್ಟಿದ್ದೆ. ನಮಗೂ 25 ಕೋಟಿ ಕೊಡಬೇಕಾಗುತ್ತದೆ. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಶಾಸಕರಾದವರದು ದೌರ್ಭಾಗ್ಯ ಎಂದರು.

ಸಿಎಂ ನಮ್ಮ ಐಟಿ ಸೆಲ್ ಹುಡುಗರ ಜೊತೆ ಚರ್ಚಿಸಲಿ : ಕೇಂದ್ರದ ಅನುದಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆಗೆ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ಸಿಎಂಗೆ ಪ್ರಧಾನಿ ಜೊತೆ ಮಾಡಲು ಆಗಲ್ಲ ಅನ್ನುವುದು ಗೊತ್ತಿದೆ. ಅವರು ಮೊದಲು ನಮ್ಮ ಐಟಿ ಸೆಲ್ ಹುಡುಗರ ಜೊತೆ ಚರ್ಚೆ ಮಾಡಲಿ. ನಮ್ಮ ಐಟಿ ಸೆಲ್ ಹುಡುಗರು ಎಲ್ಲ ಮಾಹಿತಿ ಇಟ್ಟುಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.
ಇನ್ನು ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ಜಾರಿಗೆ ಸರ್ಕಾರ ಮತ್ತೆ ಪ್ರಯತ್ನ ಮಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಅವಧಿಯಲ್ಲಿಯೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ಅದರಲ್ಲಿ ಅವೈಜ್ಞಾನಿಕ ಏನಿದೆ ಎಂದು ಪ್ರಶ್ನಿಸಿದರು.
ಸಂಸದ ಅನಂತಕುಮಾರ್ ಹೆಗಡೆ ಅವರ ಮಾತಿನ ಕುರಿತು ಪ್ರತಿಕ್ರಿಯಿಸಿ, ಯಾರೂ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಯಾರದಾದರೂ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಸಿಎಂ ಸಿದ್ದರಾಮಯ್ಯ ಅವರು ಭೂಮಿ ಮೇಲೆ ಇರುವ ಎಲ್ಲರ ಬಗ್ಗೆಯೂ ಏಕ ವಚನದಲ್ಲಿ ಮಾತನಾಡುತ್ತಾರೆ. ಆದರೆ, ಅವರ ಬಗ್ಗೆ ಬೇರೆಯವರು ಮಾತನಾಡಿದರೆ ಅದು ತಪ್ಪು ಎನ್ನುತ್ತಾರೆ. ಅದೇ ಈಗ ಪ್ರಶ್ನೆಯಾಗಿದೆ ಎಂದು ಹೇಳಿದರು.