೧೨ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ೧೨ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾ. ೨೦ರಿಂದ ೨೪ರ ವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ರಾಜಧಾನಿಯಲ್ಲಿ ಮೋಡಕವಿದ ವಾತಾವರಣವಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಏಪ್ರಿಲ್‌ನಲ್ಲಿ ಕೂಡ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮೇ ಅಂತ್ಯದ ವೇಳೆಗೆ ಎಲ್‌ನಿನೋ ಪ್ರಭಾವ ಕಡಿಮೆಯಾಗಲಿದೆ. ಮುಂಬರುವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ತಾಪಮಾನದ ಮುನ್ಸೂಚನೆ: ಮುಂದಿನ ಒಂದೆರಡು ದಿನ ಕರಾವಳಿಯ ಪಣಂಬೂರು ಜಿಲ್ಲೆ ಮತ್ತು ಒಳನಾಡಿನ ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ೨ ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ ೩೫ ಮತ್ತು ಕನಿಷ್ಠ ಉಷ್ಣಾಂಶ ೨೧ ಡಿಗ್ರಿ ಸೆಲಿಸಿಯಸ್ ಇರುವ ಸಾಧ್ಯತೆ ಇದೆ ಎಂದಿದೆ.