25ರಿಂದ ಮೊಟ್ಟೆ, ಬಾಳೇಹಣ್ಣು ವಿತರಣೆ
ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಎಲ್‌ಕೆಜಿ, ಯುಕೆಜಿ ಹಾಗೂ ೧ರಿಂದ ೧೦ನೇ ತರಗತಿಯವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಸೆ.೨೫ರಿಂದ ಮೊಟ್ಟೆ, ಬಿಸಿ ಹಾಲು ಬಾಳೇಹಣ್ಣು ಹಾಗೂ ಶೇಂಗಾ ಚಿಕ್ಕಿಯನ್ನು ನೀಡುವಂತೆ ಸರ್ಕಾರ ಅಧಿಕೃತ ಸೂಚನೆ ಹೊರಡಿಸಿದೆ.
ಅಜೀಂ ಪ್ರೇಮ್‌ಜೀ ಫೌಂಡೇಶನ್ ಸಂಸ್ಥೆಯ ಅನುದಾನ ೧೫೯೧ ಕೋಟಿ ರೂ. ವೆಚ್ಚದಲ್ಲಿ ೫೫ ಲಕ್ಷ ವಿದ್ಯಾರ್ಥಿಗಳಿಗೆ ವಾರದ ೬ ದಿನ ಪೌಷ್ಟಿಕ ಆಹಾರ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಸೆ.೨೫ರಂದು ಯಾದಗಿರಿ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವ ಶರಣ ಬಸಪ್ಪ ದರ್ಶನಾಪುರ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಅಂದೇ ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಶಾಲಾ ವಿದ್ಯಾರ್ಥಿಗಳಿಗೆ ಅಪೌಷ್ಟಿಕತೆ ನಿವಾರಿಸಿ ಆರೋಗ್ಯಕರ ದೈಹಿಕ ಮಾನಸಿಕ ಬೆಳವಣಿಗೆಯನ್ನು ನಿರಂತರ ಕಲಿಕೆಯನ್ನು ಪ್ರೋತ್ಸಾಹಿಸಲು ಮತ್ತು ಶಾಲಾ ತರಗತಿ ದಾಖಲಾತಿಯನ್ನು ಹೆಚ್ಚಿಸಲು ರಾಜ್ಯದಲ್ಲಿಯೇ ವಿನೂತನವಾಗಿ ಶಾಲೆಗಳಲ್ಲಿ ಪೂರಕ ಪೌಷ್ಟಿಕ ಆಹಾರವಾಗಿ ಬಿಸಿಹಾಲು, ಮೊಟ್ಟೆ, ಬಾಳೇಹಣ್ಣು, ಶೇಂಗಾ ಚಿಕ್ಕಿಯನ್ನು ವಿತರಿಸುವ ಕಾರ್ಯಕ್ರಮವನ್ನು ಮಧ್ಯಾಹ್ನದ ಬಿಸಿಯೂಟದೊಂದಿಗೆ ಕಳೆದ ಸಾಲಿನಿಂದ ೫೫ ಲಕ್ಷ ವಿದ್ಯಾರ್ಥಿಗಳಿಗೆ ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದೆ.