CBIಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್
ಬೆಂಗಳೂರು: ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ಕ್ಯಾಬಿನೆಟ್ ನಿರ್ಧಾರ ತೆಗೆದುಕೊಡಿದೆ.
ನಗರದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 28 ವಿಷಯಗಳನ್ನ ಪರಿಶೀಲಿಸಲಾಯಿತು. ಎರಡು ವಿಷಯ ಹೊರತು ಪಡಿಸಿ ಉಳಿದಿದ್ದೆಲ್ಲಾ ವಿಷಯಗಳ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಕ್ಯಾಬಿನೆಟ್ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ರಾಜ್ಯ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧರಿಸಿದೆ ಎಂದು ತಿಳಿಸಿದರು. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಯಾರಾದರೂ ದೂರು ನೀಡಿದರೆ ಮುಕ್ತವಾಗಿ ಸಿಬಿಐ ತನಿಖೆ ನಡೆಸಬಹುದಿತ್ತು. ಅದಕ್ಕೆ ಕರ್ನಾಟಕ ಸರ್ಕಾರವೇ ಅವಕಾಶ ಮಾಡಿಕೊಟ್ಟಿತ್ತು. ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐಗೆ ಮುಕ್ತ ಅವಕಾಶವಿತ್ತು. ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲೀಶ್‌ಮೆಂಟ್ ಆಕ್ಟ್ 1946 ಅಡಿ ಅವಕಾಶ ಇತ್ತು. ಈಗ ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ಹಿಂಪಡೆಯಲು ತೀರ್ಮಾನಿಸಿದೆ. ರಾಜ್ಯಪಾಲರು ಮೇಲಿಂದ ಮೇಲೆ ಅಸಹನೆ ವರ್ತನೆಯಲ್ಲಿ ಪತ್ರ ಬರೆಯುತ್ತಿದ್ದಾರೆ. ಮಾಹಿತಿಯನ್ನು ತಕ್ಷಣ ಕಳಿಸಬೇಕು ಎಂದು ಸೂಚನೆ ಕೊಡುತ್ತಿದ್ದಾರೆ. ಹೀಗಾಗಿ ನಿಯಮಾವಳಿ ಪರಿಶೀಲನೆ ಮಾಡಿ, ಯಾವುದೇ ಮಾಹಿತಿಯನ್ನು ರಾಜ್ಯಪಾಲರಿಗೆ ಕಳಿಸುವ ಸಂದರ್ಭದಲ್ಲಿ ಕ್ಯಾಬಿನೆಟ್ ಮುಂದೆ ತಂದು ಮುಂದುವರಿಯುವಂತೆ ಕ್ಯಾಬಿನೆಟ್ ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.